ಜಿಲ್ಲೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟಿಕೆ ರೈಲು ಹಿಡಿದು ಅಕ್ರೋಶ

ಎ.ಎಸ್.ಮಣಿಕಂಠ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಆಟಿಕೆ ರೈಲು ಹಿಡಿದು ಸೋಮವಾರ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟಿಕೆ ರೈಲು ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂಕೂಡ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕಣ್ಣುಮುಚ್ಚಿಕೊಂಡಿದ್ದು, ಕರ್ನಾಟಕ ಋಣ ತೀರಿಸುವಲ್ಲಿ ರೀಲ್ ಬಿಡುತ್ತಿವೆ ಎಂದು ದೂರಿದರು.

ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿ ವಜಾಗೊಳಿಸಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ವೀರಭದ್ರ, ರಾಜಪ್ಪ, ತಾಂಡವಮೂರ್ತಿ, ಪ್ರಕಾಶ್, ಮಂಜು ಇತರರು ಭಾಗವಹಿಸಿದ್ದರು.