ಜಿಲ್ಲೆ

ಪೇಪರ್ ತಟ್ಟೆ ಹಿಡಿದು ವಿನೂತನ ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೇಪರ್ ತಟ್ಟೆ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೇಪರ್ ತಟ್ಟೆ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿ ವಜಾಗೊಳಿಸಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿರಾಜು, ಚಾ.ವೆಂ.ರಾಜ್ ಗೋಪಾಲ್, ಮಹೇಶ್‌ಗೌಡ, ಗು.ಪುರುಷೋತ್ತಮ್,ಲಿಂಗರಾಜು, ರಾಜಪ್ಪ, ಚಾ.ಸಿ.ಸಿದ್ದರಾಜು, ವೀರಭದ್ರ, ತಾಂಡವಮೂರ್ತಿ, ಲಿಂಗರಾಜು, ಪ್ರಕಾಶ್ ಇತರರು ಭಾಗವಹಿಸಿದ್ದರು.