ಚಾಮರಾಜನಗರ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕತೆ ಉತ್ತಮವಾಗಿದ್ದು, ಸ್ವಾತಂತ್ರ್ಯೋತ್ಸವದ ಶತಮಾನದ ಹೊತ್ತಿಗೆ ಪ್ರಪಂಚದಲ್ಲೇ ದೇಶ ನಂ.1 ಸ್ಥಾನವನ್ನು ತಲುಪಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಸೋಮವಾರ ಆಯೋಜಿಸಿದ್ದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಸ್ತುತಪಡಿಸುವ ವಿಡಿಯೋ ರಥಗಳು ಹಾಗೂ ಪ್ರಣಾಳಿಕೆ ರೂಪಿಸುವ ಉದ್ದೇಶದಿಂದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆಯನ್ನು ಇಟ್ಟುಕೊಂಡು ಜನರ ಬಳಿಗೆ ಹೋಗಿ ಎಂದು ಪ್ರಧಾನಿ ನರೇಂದ್ರಮೋದಿ ಸೂಚನೆ ನೀಡಿದ್ದಾರೆ. ಅದರಂತೆ 2013-14ರಲ್ಲಿ ಮೋದಿ ಅವರು ಅಧಿಕಾರ ವಹಿಸಿಕೊಂಡಾಗ ದೇಶದ ಆರ್ಥಿಕ ಸ್ಥಿತಿ 10ನೇ ಸ್ಥಾನದಲ್ಲಿತ್ತು. ಪ್ರಸ್ತುತ 5ನೇ ಸ್ಥಾನಕ್ಕೆ ತಲುಪಿದ್ದೇವೆ. ಈ ನಿಟ್ಟಿನಲ್ಲಿ ಮೂರನೇ ಅವಧಿಗೂ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದರು.
ರಾಜ್ಯದಾದ್ಯಂತ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದ ಸಾಧನೆಗಳನ್ನು ಪ್ರಸ್ತುತಪಡಿಸುವ ಉದ್ದೇಶದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರದ ಎರಡು ವಿಕಸಿತ ಭಾರತದ ವಿಡಿಯೊ ಪ್ರಸಾರದ ರಥಗಳು ಸಂಚಾರ ಮಾಡಲಿದೆ. ಪ್ರಣಾಳಿಕೆ ರೂಪಿಸುವ ಉದ್ದೇಶದಿಂದ ಜನರಿಂದಲೇ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.
ಲೋಕಸಭಾ ಚುನಾವಣಾ ಪ್ರಭಾರಿ ಫಣೀಶ್ ಮಾತನಾಡಿ, ಕೇಂದ್ರ ಸರ್ಕಾರ 300 ಕ್ಕೂ ಹೆಚ್ಚು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ವಿಡಿಯೋ ರಥಗಳು ಚುನಾವಣೆವರೆಗೆ ಪ್ರತಿಯೊಂದು ಗ್ರಾಮ ಮತ್ತು ಪಟ್ಟಣಗಳಲ್ಲಿ ಸಂಚಾರ ಮಾಡಲಿವೆ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್, ಮೈಸೂರು ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಲೋಕಸಭಾ ಕ್ಷೇತ್ರದ ಸಂಯೋಜಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಪಂಚಾಯಿತ್ ರಾಜ್ ಪ್ರಕೋಸ್ಟ ರಾಜ್ಯ ಸಹ ಸಂಚಾಲಕಿ ನಾಗಶ್ರೀ ಪ್ರತಾಪ್, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ನೂರೊಂದು ಶೆಟ್ಟಿ, ಅಭಿಯಾನದ ಸಂಚಾಲಕ ಕೆರೆಹಳ್ಳಿ ಮಹದೇವಸ್ವಾಮಿ, ಸಹ ಸಂಚಾಲಕ ಮಧುರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಭೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಹನೂರು ವೆಂಕಟೇಶ್, ವಿವಿಧ ಮಂಡಲ ಅಧ್ಯಕ್ಷರಾದ ಶಿವರಾಜ್, ಮಹೇಶ್, ವೃಷಭೇಂದ್ರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಮಹದೇವಸ್ವಾಮಿ ಹಾಗೂ ಇತರರು ಭಾಗವಹಿಸಿದ್ದರು.