ಜಿಲ್ಲೆ

ನೀಟ್ ಪರೀಕ್ಷೆ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ : ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮುಂಭಾಗ ಜಮಾಯಿಸಿದ ವಿದ್ಯಾರ್ಥಿಗಳು ಕೆಲಕಾಲ ೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಸಹ ಸಂಚಾಲಕಿ ಚಂದನ ಮಾತನಾಡಿ, ಜೂ.4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಷಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ ಎಂದು ಆರೋಪಿಸಿದರು.

ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷೆ ಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ ಎಂದು ಹೇಳಿದರು.

ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣವೊಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆ ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿ ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ನಿಜವಾಗಿದೆ. ಈ ಹಿನ್ನೆಲೆಯಲ್ಲಿ, ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಪದಾಧಿಕಾರಿ ಹೇಮಲತಾ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.