ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಭಾನುವಾರ ಖಾಲಿ ಕೊಡ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಯಿತು.
ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು, ಖಾಲಿ ಕೊಡ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ವಾಹನ ಸಂಚಾರ ತಡೆದರು. ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರ ತಮಿಳುನಾಡು ಒತ್ತಡಕ್ಕೆ ಮಣಿದು ಕೆಆರ್‌ಎಸ್, ಕಬಿನಿ ಜಲಾಶಯಗಳಿಂದ ಪ್ರತಿ ದಿನ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು. ಇದೇ ರೀತಿ ಪ್ರತಿ ದಿನ ನೀರನ್ನು ಬಿಡುಗಡೆ ಮಾಡುತ್ತಿದ್ದರೆ ಜಲಾಶಯಗಳು ಖಾಲಿಯಾಗಿ ರಾಜ್ಯದ ಜನತೆಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ಶಾ.ಮುರಳಿ, ಚಾ.ವೆಂ.ರಾಜ್‌ಗೋಪಾಲ್, ಪಣ್ಯದಹುಂಡಿರಾಜು, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ, ಮಹದೇವನಾಯಕ, ವೀರಭದ್ರ, ತಾಂಡವಮೂರ್ತಿ, ಸೋಮವಾರಪೇಟೆ ಮಂಜು ಭಾಗವಹಿಸಿದ್ದರು.