ಮಂಡ್ಯ: ನಗರದ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಅಧಿಕಾರ ದುರುಪಯೋಗಪಡಿಸಿಕೊಂಡು ಹಣ ದುರ್ಬಳಕೆ ಮಾಡಿ ಆರೋಪದ ಹಿನ್ನೆಲೆಯಲ್ಲಿ ಹಾಲಿ ಮದ್ದೂರು ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ.ಬಿ.ಬಿ.ಪ್ರವೀಣ್‌ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಸಹಾಯಕ ನಿರ್ದೇಶಕರಾಗಿದ್ದ ವೇಳೆ 2018-19ನೇ ಸಾಲಿನಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ 500 ಮಾಂಸದ ಕೋಳಿ ಘಟಕ ಸ್ಥಾಪಿಸಲು ಇರುವ ಯೋಜನೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡದೆ ಮತ್ತು ಫಲಾನುಭವಿಗಳಿಗೆ ಸಹಾಯಧನವನ್ನು ಮಂಜೂರು ಮಾಡದೇ ಕೇವಲ ನಕಲಿ ದಾಖಲೆಗಳನ್ನು ನಮೂದಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆಂದು ಕೃಷ್ಣ ಎಂಬುವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಯೋಜನಾ ಹಣವನ್ನು ದುರುಪಯೋಗಮಾಡಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಆರೋಪಗಳ ಕುರಿತಂತೆ ಶಿಸ್ತು ಪ್ರಕರಣವನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣ ಬಸಪ್ಪ ಜ.6ರಂದು ಆದೇಶ ಹೊರಡಿಸಿದ್ದಾರೆ.
ಮಾತ್ರವಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿ 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಎಂ.ಸುಮಿತ್ರಾ ಜ.6ರಂದು ಜಿಲ್ಲಾ ಸಮಾಜಕಲ್ಯಾಣಾಧಿಕಾರಿಗೆ ಸೂಚನೆ ನೀಡಿದ್ದಾರೆ.