ಚಿಕ್ಕಬಳ್ಳಾಪುರ: ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವ ತೀರ್ಮಾನಕ್ಕೆ ಬೇಸರವೇನೋ ಇಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಅಯ್ಯರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಆಯ್ಕೆಯಾದ ೫ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಬೇಕೆಂಬುದಾಗಿ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪತ್ರದಲ್ಲಿ ಸಹಿ ಹಾಕಿದ ೨೮ ಶಾಸಕರ ಪೈಕಿ ನಾನು ಒಬ್ಬ. ಆದರೆ, ಹೊಸಬರಿಗೆ ಅವಕಾಶ ಇಲ್ಲ ಎನ್ನುವುದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದರಿಂದ ಬೇಸರಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಿದ್ದಾರೆ. ಈಗ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ.ಸುಧಾಕರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಇಲ್ಲವೇ ವಿಧಾನಪರಿಷತ್‌ಸದಸ್ಯ ಎಂ.ಆರ್.ಸೀತರಾಮ್‌ಗೆ ಸಚಿವ ಸ್ಥಾನ ನೀಡಲಿ ಎಂದು ಮನವಿ ಮಾಡಿದ್ದಾರೆ.
ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದು ಸಚಿವ ಸ್ಥಾನ ಸಿಗಲಿಲ್ಲ ಹಾಗೂ ಹಿಂದೆ ಸರಿಯಲಾಗುತ್ತಿದೆ ಎಂಬ ಬೇಸರವಿಲ್ಲ. ವರಿಷ್ಠರು ಈ ವಿಚಾರದಲ್ಲಿ ಬಾಯಿ ಮುಚ್ಚಿಕೊಂಡು ಇರಲು ಆದೇಶಿಸಿದ್ದು ಅದರಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.