ಸಂಸತ್ತಿನಲ್ಲಿ ಸಂಸದ ಡಾ ಕೆ.ಸುಧಾಕರ್ ಮಾತನಾಡುತ್ತಿರುವುದು.
ಚಿಕ್ಕಬಳ್ಳಾಪುರ: ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳ ನೀರನ್ನು ಮೂರು ಹಂತಗಳಲ್ಲಿ ಸಂಸ್ಕರಿಸಿ, ಕೆರೆಗಳಿಗೆ ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದ ಅವರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಭಾಗಕ್ಕೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆಯ ನೀರನ್ನು ಹರಿಸುವ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಅನೇಕ ಉತ್ತಮ ಯೋಜನೆಗಳನ್ನು ರದ್ದುಗೊಳಿಸಿದೆ. ಇದರಲ್ಲಿ ಮೂರನೇ ಹಂತದ ಸಂಸ್ಕರಣೆ ಪ್ರಕ್ರಿಯೆಯು ಸಹ ಸೇರಿದೆ ಎನ್ನುವುದನ್ನು ಗಮನಕ್ಕೆ ತಂದಿದೆ.
ಬಯಲುಸೀಮೆಗೆ ಈಗಾಗಲೇ ಪೂರೈಕೆಯಾಗುತ್ತಿರುವ ದ್ವಿತೀಯ ಹಂತದ ಸಂಸ್ಕರಣೆಯ ನೀರನ್ನು ಕೆಲವು ಸಂಸ್ಥೆಗಳು ಪರೀಕ್ಷಿಸಿದ್ದು ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದು ವರದಿಯಲ್ಲಿ ತಿಳಿದು ಬಂದಿದೆ. ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲೇ ಸಂಸ್ಕರಿಸಿ ಬಳಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿಯೇ ಈಗಾಗಲೇ ತಿಳಿಸಲಾಗಿದೆ. ಮೊದಲಿಗೆ ಈ ನಿಯಮವನ್ನು ಕರ್ನಾಟಕ ಸರ್ಕಾರ ಅನುಷ್ಠಾನಗೊಳಿಸಬೇಕಾಗಿದೆ. ಇದರ ಜತೆಗೆ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಶಾಶ್ವತ ನೀರಾವರಿ ಕಲ್ಪಿಸಲು ಕೃಷ್ಣ ನದಿಯಿಂದ ಕನಿಷ್ಠ 15 ಟಿಎಂಸಿ ನೀರನ್ನು ತಂದು ಬಯಲುಸೀಮೆಗೆ ನೀಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.