ಸುಪ್ರೀಂ ಕೋರ್ಟ್ ನಲ್ಲಿ ಸುಬ್ಬಾರೆಡ್ಡಿ ಪರ ತೀರ್ಪು
ಚಿಕ್ಕಬಳ್ಳಾಪುರ: ಸರ್ವೋಚ್ಚ ನ್ಯಾಯಾಲಯದಿಂದ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ರಿಲೀಫ್ ಸಿಕ್ಕಿದೆ. ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿದೆ.
ಕಳೆದ ೨೦೨೩ ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಪರ್ಧೆಯ ವೇಳೆ ಚುನಾವಣಾ ಆಯೋಗಕ್ಕೆ ಸುಬ್ಬಾರೆಡ್ಡಿ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡ ಸಿ.ಮುನಿರಾಜು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ ಆದೇಶ ನೀಡಿತ್ತು. ಇದರಿಂದ ಶಾಕ್ ಆದ ಸುಬ್ಬಾರೆಡ್ಡಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದು ಇಲ್ಲಿ ತಡೆಯಾಜ್ಞೆ ಸಿಕ್ಕಿದೆ.
ಇನ್ನು ಶಾಸಕರ ಪರವಾಗಿ ಆದೇಶ ಬರುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಬಾಗೇಪಲ್ಲಿ ಹಾಗೂ ಗುಡಿಬಂಡೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಶಾಸಕರ ಪರ ಘೋಷಣೆಗಳನ್ನು ಕೂಗಿದರು.
ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಇನ್ನು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿರುವ ಪ್ರಮಾಣ ಪತ್ರದಲ್ಲಿನ ಲೋಪಗಳು, ಇದನ್ನು ಪರಿಗಣಿಸಿ ಕ್ರಮ ಕೈಗೊಳ್ಳಬೇಕಾಗಿರುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ದೂರುದಾರರು ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಿದ್ದು ಪ್ರಕರಣದ ವಿಚಾರಣೆ ನಡೆಯಲಿದೆ. ಇದು ಮುಗಿದ ಬಳಿಕ ಏನು ತೀರ್ಮಾನ ಬರುತ್ತದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ.