ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ 26ರಂದು ನಡೆಯುವ 6ನೇ ಜಿಲ್ಲಾ ಜಾನಪದ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಶಾಸಕ ಎಚ್.ಡಿ.ತಮ್ಮಯ್ಯ ಬಿಡುಗಡೆಗೊಳಿಸಿದರು
ಚಿಕ್ಕಮಗಳೂರು: ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಜಾನಪದ ಸಮ್ಮೇಳನ ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದಿಂದ ನಗರದಲ್ಲಿ ಏ.26ರಂದು ನಡೆಯುವ 6ನೇ ಜಿಲ್ಲಾ ಜಾನಪದ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಈ ನೆಲದ ಮೂಲ ಬೇರು. ಜಾನಪದ ಅನಕ್ಷರಸ್ಥರಿಂದ ಹುಟ್ಟಿ, ಬಾಯಿಂದ ಬಾಯಿಗೆ ಹರಿದು ಬರುವ ಮೂಲಕ ಇದುವರೆಗೆ ಬೆಳೆದು ಬಂದಿದೆ. ನಮ್ಮ ಹಿರಿಯರು ತಮ್ಮ ಶ್ರಮದ ಬದುಕಿನ ನಡುವೆ ಜಾನಪದವನ್ನು ಕಟ್ಟಿ ಬೆಳೆಸಿದ್ದಾರೆ. ಅದನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾದ ಅನಿವಾರ್ಯತೆ ಮತ್ತು ಹೊಣೆಗಾರಿಕೆ ನಮ್ಮೆಲ್ಲರ ಮೇಲಿದ್ದು, ಅದನ್ನು ಎಲ್ಲರೂ ಪ್ರಾಮಾಣಿಕವಾಗಿ ಮಾಡಬೇಕು ಎಂದರು.
ಜಾನಪದ ಸಮ್ಮೇಳನ, ಜಾನಪದ ಕಾರ್ಯಕ್ರಮಗಳನ್ನು ನಡೆಸುವುದರಿಂದ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್‌ನ ಕಾರ್ಯ ಸ್ತುತ್ಯಾರ್ಹ. ಸಮ್ಮೇಳನದ ಯಶಸ್ಸಿಗೆ ಎಲ್ಲರೂ ದುಡಿಯಬೇಕು. ಗ್ರಾಮೀಣರು ಮತ್ತು ಯುವ ಜನತೆ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
4ನೇ ಜಿಲ್ಲಾ ಜಾನಪದ ಸಮ್ಮೇಳನದ ಅಧ್ಯಕ್ಷ ಬೆಳವಾಡಿ ಪರಮೇಶ್ವರಪ್ಪ, ಕರ್ನಾಟಕ ಜಾನಪದ ಪರಿಷತ್‌ನ ಜಿಲ್ಲಾ ಸಂಚಾಲಕಿ ಗಾಯತ್ರಿ, ಜಿಲ್ಲಾ ಸಂಚಾಲಕ ಬಕ್ಕಿ ರವಿ, ಉಪಾಧ್ಯಕ್ಷ ತಿಪ್ಪೇಶ್, ಶೈಲಾ ಬಸವರಾಜ್, ತಾಲೂಕು ಅಧ್ಯಕ್ಷ ಸಚಿನ್‌ಸಿಂಗ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ನೇತ್ರ, ಉಪಾಧ್ಯಕ್ಷೆ ಅನ್ನಪೂರ್ಣ, ಎಂ.ಎಸ್.ನಾಗರಾಜ್, ಮೂಡಿಗೆರೆ ತಾಲೂಕು ಅಧ್ಯಕ್ಷ ಕುನ್ನಳ್ಳಿ ರವಿ, ವಿನೀತ್ ಕುಮಾರ್, ಸಖರಾಯಪಟ್ಟಣ ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.