ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನೀರಿ ಬಳಕೆದಾರರ ಸಂಘದಿಂದ ರೈತರಿಗೆ ಕೃಷಿ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಿದರು.
ರಾಜ್ಯದಲ್ಲಿ ರೈತರಿಗೆ ಹಗಲು ವೇಳೆಯಲ್ಲಿ ಏಳು ಗಂಟೆಗಳ ಗುಣಮಟ್ಟದ ಉಚಿತ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಮೂಲ ಸೌಕರ್ಯವನ್ನು ಬಲಪಡಿಸಲಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಅಜ್ಜಂಪುರದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನೀರಿ ಬಳಕೆದಾರರ ಸಂಘದಿಂದ ರೈತರಿಗೆ ಕೃಷಿ ಪರಿಕರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ೨೦೩೫ರ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಸುಮಾರು ೪೦೦ ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಟ್ರಾನ್ಸ್‌ಫಾರ್ಮರ್ ಸಾಮರ್ಥ್ಯ ಹೆಚ್ಚಿಸುವ ಕಾರ್ಯವೂ ನಡೆಯುತ್ತಿದೆ ಎಂದು ತಿಳಿಸಿದರು.
ಕುಸುಮ್-ಬಿ ಯೋಜನೆಯಡಿ ದೂರದ ಕೃಷಿ ಪಂಪ್‌ಸೆಟ್‌ಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದ್ದು, ಸಾವಿರಾರು ರೈತರು ಇದರ ಪ್ರಯೋಜನ ಪಡೆದಿದ್ದಾರೆ. ಕುಸುಮ್-ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದ್ದು, ರೈತರಿಗೆ ಹಗಲು ವೇಳೆಯಲ್ಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ ಎಂದು ಹೇಳಿದರು.
ಶರಾವತಿ ಪಂಪ್ ಸ್ಟೋರೇಜ್ ಯೋಜನೆಯಿಂದ ರಾಜ್ಯಕ್ಕೆ ಸುಮಾರು ೩,೦೦೦ ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದ್ದು, ಪೀಕ್ ಅವರ್ಸ್‌ನಲ್ಲಿ ವಿದ್ಯುತ್ ಕೊರತೆ ನಿವಾರಣೆಗೆ ನೆರವಾಗಲಿದೆ. ಯೋಜನೆಗೆ ಅಗತ್ಯವಿರುವ ಎಲ್ಲಾ ಪರಿಸರ ಹಾಗೂ ತಾಂತ್ರಿಕ ಅನುಮತಿಗಳನ್ನು ಪಡೆದು ಮಾತ್ರ ಅನುಷ್ಠಾನಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಅದರ ಲಾಭ ನೇರವಾಗಿ ಜನಸಾಮಾನ್ಯರಿಗೆ ತಲುಪಿದೆ. ರೈತರ ಆದಾಯ ಹೆಚ್ಚಿಸುವುದು, ಗುಣಮಟ್ಟದ ವಿದ್ಯುತ್ ಪೂರೈಕೆ ಹಾಗೂ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ತರೀಕೆರೆ ಪುರಸಭೆ ಅಧ್ಯಕ್ಷ ಕೆ.ಆರ್.ವಸಂತಕುಮಾರ್. ಉಪಾಧ್ಯಕ್ಷೆ ಶಮೀಮಾ ಬಾನು, ತರೀಕೆರೆ ಉಪ ವಿಭಾಗಾಧಿಕಾರಿ ನಟೇಶ್ ಕಾರ್ಯಕ್ರಮದಲ್ಲಿದ್ದರು.