- ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ
- ಗಾಂಜಾ ಪೆಡ್ಲರ್ ಬಂಧನ
ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್ ಓರ್ವನನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಎಐಟಿ ಕಾಲೇಜು ಮುಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ನಗರ ಪೊಲೀಸ್ ಠಾಣೆ ಪಿಎಸ್ಐ ಟಿ.ಎಂ.ಧನರಾಜ್ ಅವರು ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆ ಕೈಗೊಂಡು ಗಾಂಜಾ ಫೆಡ್ಲರ್ ನನ್ನು ಬಂಧಿಸಿದ್ದಾರೆ.
ಬಾತ್ಮಿದಾರರಿಂದ ಬಂದ ಖಚಿತ ಸುಳಿವಿನ ಮೇರೆಗೆ ಕಾಲೇಜು ಮುಂಭಾಗದ ನಿಗದಿತ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಗಾಂಜಾ ಮಾರಾಟದ ದಂಧೆಯಲ್ಲಿ ನಿರತನಾಗಿದ್ದ ವ್ಯಕ್ತಿಯನ್ನು ಸುತ್ತುವರಿದು ವಶಕ್ಕೆ ಪಡೆದಿದೆ. ಯುವ ಪೀಳಿಗೆಯನ್ನು ಮಾದಕ ವ್ಯಸನದ ಕೂಪಕ್ಕೆ ತಳ್ಳುತ್ತಿದ್ದ ಆರೋಪಿಯ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಮಾರಾಟ ಜಾಲದ ಹಿಂದಿರುವ ಇತರೆ ಕಿಂಗ್‌ಪಿನ್‌ಗಳ ಪತ್ತೆಗೆ ತನಿಖೆ ಚುರುಕುಗೊಳಿಸಿರುವ ಕಾರಣದಿಂದಾಗಿ ಬಂಧಿತನ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.