ಕ್ರೈಂ 
ಚಿಕ್ಕಮಗಳೂರು

ಅಪ್ರಾಪ್ತೆ ಅತ್ಯಾಚಾರ ಆರೋಪಿಗೆ 20ವರ್ಷ ಜೈಲು ಶಿಕ್ಷೆ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ ಟಿಎಸ್ ಸಿ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕೊಪ್ಪ ತಾಲೂಕು ಹೆಗ್ಗಾರು ಗ್ರಾಮದ ಕಾರೆಮನೆಯ ಕೆ.ಎಸ್.ಸಂತೋಷ್ ಶಿಕ್ಷೆಗೆ ಗುರಿಯಾದ ಆರೋಪಿ. ಈತ ತನ್ನ ಸಂಬಂಧಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಹಲವು ಬಾರಿ ಅತ್ಯಾಚಾರ ನಡೆಸಿದ. ಹೀಗಾಗಿ ಅಪ್ರಾಪ್ತ ಬಾಲಕಿ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಅಪ್ರಾಪ್ತೆಯ ತಾಯಿ ಸಂತೋಷ್ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ ಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕ ಮಂಜು ಅವರು ಆರೋಪಿಯ ವಿರುದ್ಧ ಸಾಕ್ಷ ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಘವೇಂದ್ರ ಗುರುಪ್ರಸಾದ್ ಕುಲಕರ್ಣಿ ಅವರು ಸಂತೋಷ್ ಮೇಲಿನ ಆರೋಪ ಸಾಬೀತಾಗಿದ್ದರಿಂದ ಆತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 25 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಗೆ ಕರ್ನಾಟಕ ರಾಜ್ಯದ ಸಂತ್ರಸ್ತರ ಪರಿಹಾರ ನಿಧಿಯಿಂದ ನಾಲ್ಕು ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಬಿ‌.ಭರತ್ ಕುಮಾರ್ ವಾದ ಮಂಡಿಸಿದ್ದರು.