ಮೂಡಿಗೆರೆ: ಗ್ಯಾರಂಟಿ ಯೋಜನೆಯಿಂದ ಇತರ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ವಿಪಕ್ಷಗಳು ಟೀಕೆ ಮಾಡುತ್ತಿರುವುದು ಪ್ರಚಾರ ಪಡೆಯುವ ಸಲುವಾಗಿ. ಅಂಥ ಟೀಕೆಗಳಿಗೆ ರಾಜ್ಯದ ಜನ ಕಿವಿಗೊಡುತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಧರ್ಮಸ್ಥಳಕ್ಕೆ ತೆರಳುವ ಸಲುವಾಗಿ ಸೋಮವಾರ ಸಂಜೆ ಮೂಡಿಗೆರೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳು ಪ್ರತಿ ತಿಂಗಳೂ ಫಲಾನುಭವಿಗಳ ಮನೆಗೆ ಸೇರುತ್ತಿವೆ. ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗದಂತೆ ಎಚ್ಚರವಹಿಸಲು ರಾಜ್ಯ, ಜಿಲ್ಲೆ ಮತ್ತು ಪ್ರತಿ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸ್ಥಾಪಿಸಲಾಗಿದೆ. ಇದರಿಂದ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ನಡೆಯುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಾಗಿ ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ತೆಗೆದಿರಿಸಲಾಗಿದೆ. ಬಜೆಟ್ ತಯಾರಿಸಿದ ಬಳಿಕ ಅನುದಾನ ಕೊರತೆ ಉಂಟಾಗಲು ಹೇಗೆ ಸಾಧ್ಯ? ರಾಜ್ಯದ ಅಭಿವೃದ್ಧಿಗೆ ಬಜೆಟ್ನಲ್ಲಿ ನಿಗದಿಪಡಿಸಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿರುವುದರಿಂದ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ ಎಂದು ತಿಳಿಸಿದರು.
ಪ್ರತಿ ವರ್ಷ ಮಳೆಗಾಲ ಆರಂಭವಾದೊಡನೆ ರಸ್ತೆಗಳು ಸಹಜವಾಗಿ ಗುಂಡಿ ಬೀಳುತ್ತವೆ. ಮಳೆ ಕಡಿಮೆಯಾದಾಗ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಲೋಕೋಪಯೋಗಿ ಇಲಾಖೆಗೆ ಸೇರಿದ ಎಲ್ಲ ರಸ್ತೆಗಳ ಸ್ಥಿತಿಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ರಸ್ತೆಗಳ ಅಭಿವೃದ್ಧಿಯ ರೂಪುರೇಷೆ ಸಿದ್ಧಪಡಿಸಲಾಗಿದೆ. ಈಗ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದೆ. ಮಳೆ ಕಡಿಮೆಯಾದ ಕೂಡಲೆ ಗುಂಡಿಯಾದ ಎಲ್ಲ ರಸ್ತೆಗಳನ್ನೂ ಅಭಿವೃದ್ಧಿಪಡಿಸಲಾಗುವುದು ಎಂದರು. ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಕುನ್ನಳ್ಳಿ ರವಿ, ಕೆಡಿಪಿ ಸದಸ್ಯ ಸುಧೀರ್ ಚಕ್ರಮಣಿ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಹೊಸಕೆರೆ ರಮೇಶ್, ಶ್ರೀನಿವಾಸ್, ಅಜ್ಮಲ್ ಇತರರಿದ್ದರು.