ಕಡೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಕಡೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನ.15ರಂದು ನಿಗದಿಯಾಗಿದ್ದ ಸಮಾವೇಶವನ್ನು ದೇವೇಗೌಡರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದ ಕಾರಣ ನ.24ಕ್ಕೆ ಮುಂದೂಡಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಸಮಸ್ಯೆ ಇರುವುದರಿಂದ ಮಂಗಳವಾರವೂ ಆಗಮಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾವೇ ಕಡೂರಿಗೆ ಆಗಮಿಸಿ ಕಾರ್ಯಕರ್ತರೊಂದಿಗೆ ಚರ್ಚಿಸಿ ಎಲ್ಲರ ಅಭಿಪ್ರಾಯದಂತೆ ಸಮಾವೇಶವನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಕಡೂರು ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದು ತಾವು ಕ್ಷೇತ್ರದ ಪಕ್ಷದ ಉಸ್ತುವಾರಿ ಹೊಣೆ ಹೊತ್ತಿದ್ದೇನೆ. ಈ ಕ್ಷೇತ್ರದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ. ಅವರ ಮಾತಿಗೆ ಎಲ್ಲರೂ ಬದ್ಧರಾಗಿರಬೇಕು. ದೇವೇಗೌಡರು ಕಡೂರಿನ ಸಮಾವೇಶಕ್ಕೆ ಬಾರದಿರಲು ಆರೋಗ್ಯ ಸಮಸ್ಯೆಯೆ ಕಾರಣ. ಬೇರೆ ಯಾವುದೇ ಕಾರಣಗಳಿಲ್ಲ. ಈ ಕುರಿತು ಹರಡುತ್ತಿರುವ ಅಪಪ್ರಚಾರಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಕಡೂರು ತಾಲೂಕು ಜೆಡಿಎಸ್ ಅಧ್ಯಕ್ಷರ ಆಯ್ಕೆಯಲ್ಲಿ ದೇವೇಗೌಡರ ತೀರ್ಮಾನವೇ ಅಂತಿಮ. ಪ್ರಸ್ತುತ ಅಧ್ಯಕ್ಷರಾಗಿರುವ ಕೆ.ಎಂ.ಮಹೇಶ್ವರಪ್ಪ ಅವರು ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೂ ಮುಂದುವರಿಯಲಿದ್ದಾರೆ. ಬೇರೆ ಯಾರನ್ನೂ ಅಧ್ಯಕ್ಷರನ್ನಾಗಿ ನೇಮಕ ಮಾಡಿಲ್ಲ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಸರ್ವಸಮ್ಮತವಾಗಿ ಆಯ್ಕೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಮಾಜಿ ಶಾಸಕ ವೈ.ಎಸ್.ವಿ.ದತ್ತ, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಬಿದರೆ ಜಗದೀಶ್, ಸಿ.ಎಚ್.ಪ್ರೇಮ್ ಕುಮಾರ್, ಬಿ.ಟಿ.ಗಂಗಾಧರ ನಾಯ್ಕ, ಡಿ.ಪ್ರಶಾಂತ್, ಹರ್ಷಿತ್, ಮಚ್ಚೇರಿ ಮಂಜು, ಬೀರೂರು ಮೋಹನ್, ಹೋಚಿಹಳ್ಳಿ ದೇವರಾಜ್ ಮತ್ತಿತರಿದ್ದರು.
----------