ಜಿಲ್ಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲೇ ಬಾಲಕಾರ್ಮಿಕ ಪದ್ಧತಿ ಜೀವಂತ

ಅವಿನಾಶ್ ಜೈನಹಳ್ಳಿ ಮೈಸೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಾಲಕಾರ್ಮಿಕ ಪದ್ಧತಿ ಜೀವಂತವಾಗಿದ್ದು, ಕಳೆದ ಮೂರು ವರ್ಷಗಳಲ್ಲಿ 93 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.

ಬಿಗಿ ಕಾನೂನು, ನಿರಂತರ ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಮುಂದುವರಿದಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ನಿರಂತರವಾಗಿ ತಾಲೂಕು, ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದರೂ, ಬಾಲಕಾರ್ಮಿಕ ಪದ್ಧತಿ ಜಾರಿಯಲ್ಲಿದೆ. ಕಳೆದ ಮೂರು ವರ್ಷಗಳಲ್ಲಿ ಹೋಟೆಲ್ ಉದ್ಯಮ, ಗುಜರಿ, ಗ್ಯಾರೇಜ್, ಬೇಕರಿ ಮತ್ತಿತರ ಕಡೆಗಳಲ್ಲಿ 93 ಬಾಲಕಾರ್ಮಿಕರನ್ನು ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ. ವಿಶೇಷವೆಂದರೆ, ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ನಗರ ಪ್ರದೇಶದಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ.

30ಕ್ಕೂ ಹೆಚ್ಚು ಕಾರ್ಯಾಚರಣೆ

ಕಳೆದೊಂದು ವಾರದಲ್ಲಿ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಕಾರ್ಯಾಚರಣೆ ನಡೆಸಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, 8 ಮಕ್ಕಳನ್ನು ರಕ್ಷಣೆ ಮಾಡಿ ಬಾಲಕರ ಬಾಲಮಂದಿರಕ್ಕೆ ಒಪ್ಪಿಸಿದ್ದಾರೆ. ಡಿಸೆಂಬರ್ 2 ರಂದು ನಂಜನಗೂಡು ತಾಲೂಕಿನಲ್ಲಿ ಹೋಟೆಲ್ ಮತ್ತು ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 18 ವರ್ಷದೊಳಗಿನ ಇಬ್ಬರು ಕಿಶೋರಾವಸ್ಥೆಯ ಮಕ್ಕಳನ್ನು ರಕ್ಷಣೆ ಮಾಡಿದ್ದರೆ, ಡಿ.4ರಂದು ನಗರದ ಹೆಬ್ಬಾಳದಲ್ಲಿನ ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ. ಹಾಗೆಯೆ, ಡಿ.6ರಂದು ಬುಧವಾರ ಹುಣಸೂರಿನ ಹೋಟೆಲ್ ಮೇಲೆ ದಾಳಿ ನಡೆಸಿ, ಇಬ್ಬರು ಕಿಶೋರಾವಸ್ಥೆ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ರಕ್ಷಿಸಲಾದ ಎಲ್ಲ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಬಳಿಕ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ಒಪ್ಪಿಸಲಾಗಿದೆ. ಹಾಗೆಯೆ, ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿದ್ದ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯೊಂದಿಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನಿರಂತರ ತಪಾಸಣಾ ಕಾರ್ಯದೊಂದಿಗೆ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದರೂ ಬಾಲಕಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದೆ. ಈ ಸಂಬಂಧ ಬಾಲಕಾರ್ಮಿಕರನ್ನು ಕೆಲಸಕ್ಕೆ ಇರಿಸಿಕೊಂಡಿದ್ದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಎಫ್‌ಐಆರ್ ದಾಖಲಾಗಿವೆ. ಜತೆಗೆ, 65 ಪ್ರಕರಣಗಳು ನ್ಯಾಯಾಲಯದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳಿಂದ ನಿರಂತರವಾಗಿ ಪ್ರಯತ್ನ

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಯಂತ್ರಣದ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ನಿರಂತರವಾಗಿ ಪ್ರಯತ್ನಿಸುತ್ತಲೇ ಇದೆ. ನೆರೆ ಜಿಲ್ಲೆ ಸೇರಿದಂತೆ ಗ್ರಾಮಾಂತರ ಪ್ರದೇಶದಿಂದ ನಗರಕ್ಕೆ ಉದ್ಯೋಗ ಅರಸಿ ಬರುವ ಕುಟುಂಬದವರು, ಜೀವನೋಪಾಯಕ್ಕೆ ಅನುಕೂಲ ಆಗಬಹುದು ಎಂಬ ಉದ್ದೇಶದಿಂದ ತಮ್ಮ ಮಕ್ಕಳನ್ನೂ ಕೆಲಸಕ್ಕೆ ಕಳುಹಿಸುತ್ತಿದ್ದಾರೆ. ಇದರಿಂದ ಅಂತಹ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದು, ಅವರ ಭವಿಷ್ಯವನ್ನು ಕತ್ತಲೆಯಲ್ಲಿ ಇಟ್ಟಂತಾಗಿದೆ. ಈ ನಡುವೆ, ಮಕ್ಕಳನ್ನು ಕೆಲಸಕ್ಕೆ ಕಳುಹಿಸದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಎಲ್ಲೆಡೆ ನಿರಂತರವಾಗಿ ಕರಪತ್ರ ಹಂಚುವ ಮೂಲಕ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ವರ್ಷದಲ್ಲಿ 900ಕ್ಕೂ ಹೆಚ್ಚು ತಪಾಸಣೆ

2022-23ರಲ್ಲಿ 71 ಬಾಲಕಾರ್ಮಿಕರು ಪತ್ತೆಯಾದ್ದರಿಂದ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, 2023ರ ಏಪ್ರಿಲ್‌ನಿಂದ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ 930 ತಪಾಸಣಾ ಕಾರ್ಯ ನಡೆಸುವ ಮೂಲಕ ಯಾವುದೇ ಕೆಲಸಗಳಿಗೆ ಬಾಲಕರನ್ನು ಬಳಸಿಕೊಳ್ಳದಂತೆ ಎಚ್ಚರ ವಹಿಸಿದ್ದಾರೆ. 2021-22ರಲ್ಲಿ 439 ತಪಾಸಣೆ ನಡೆಸಿದ್ದು, ಇದರಲ್ಲಿ 5 ಮಕ್ಕಳನ್ನು ಪತ್ತೆಹಚ್ಚಿ ರಕ್ಷಣೆ ಮಾಡಲಾಗಿತ್ತು. ಹಾಗೆಯೆ, 2022-23ರಲ್ಲಿ 659 ತಪಾಸಣೆ ನಡೆಸಿ 71 ಮಕ್ಕಳನ್ನು ರಕ್ಷಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 930 ತಪಾಸಣೆ ಮಾಡಿ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ಸಹಾಯವಾಣಿಗೆ ಸಂಪರ್ಕಿಸಿ: ಜಿಲ್ಲೆಯಲ್ಲಿ 14 ವರ್ಷ ಒಳಪಟ್ಟ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಯಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವುದು ಕಂಡುಬಂದಲ್ಲಿ ತಕ್ಷಣವೇ ಕಾರ್ಮಿಕರ ಸಹಾಯವಾಣಿ 155214 ಅಥವಾ ಮಕ್ಕಳ ಸಹಾಯವಾಣಿ-1098ಕ್ಕೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಇದರಿಂದ ಬಾಲಕಾರ್ಮಿಕರನ್ನು ರಕ್ಷಿಸಿ, ಶಿಕ್ಷಣ ಕೊಡಿಸಲು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕಮುಕ್ತ ಜಿಲ್ಲೆಯಾಗಿಸಬೇಕೆಂದು ನಿರಂತರ ತಪಾಸಣೆ ಕಾರ್ಯ ಹಾಗೂ ಎಲ್ಲೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಒಂದು ವೇಳೆ ಜಿಲ್ಲೆಯಲ್ಲಿ ಉದ್ದಿಮೆಗಳು, ಇನ್ನಿತರ ಕೆಲಸಗಳಿಗೆ ಮಕ್ಕಳನ್ನು ಬಳಿಸಿಕೊಂಡಿದ್ದು ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ 155214 ಸಂಪರ್ಕಿಸಿ ಮಾಹಿತಿ ನೀಡಬಹುದು.ರಾಜೇಶ್ ಜಾಧವ್, ಜಿಲ್ಲಾ ಕಾರ್ಮಿಕ ಅಧಿಕಾರಿ