ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಲೋಕಸಭಾ ಚುನಾವಣೆ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಜಿಲ್ಲಾ ಕಾರ್ಮಿಕ ಇಲಾಖೆ ಕಾರ್ಯಾಚರಣೆ ಚುರುಕುಪಡೆದಿದ್ದು, ಜಿಲ್ಲೆ ನಾಲ್ಕೂ ತಾಲೂಕು ವ್ಯಾಪ್ತಿಯಲ್ಲಿ ಬಾಲಕಾರ್ಮಿಕರ ರಕ್ಷಣೆಗೆ ಇಲಾಖೆ ಕಾರ್ಯಾಚರಣೆ ಮುಂದುವರೆಸಿದೆ.
ಇತ್ತೀಚಿಗಷ್ಟೇ ದೊಡ್ಡಬಳ್ಳಾಪುರ ಕಸ ಘಟಕದ ಮೇಲೆ ದಾಳಿ ನಡೆಸಿ ಶಿಕ್ಷಣದಿಂದ ವಂಚಿತರಾಗಿದ್ದ ಬಾಲಕರನ್ನು ರಕ್ಷಣೆ ಮಾಡಿದ್ದ ಜಿಲ್ಲಾ ಕಾರ್ಮಿಕ ಇಲಾಖೆ ಮಂಗಳವಾರ ಅದೇ ದೊಡ್ಡಬಳ್ಳಾಪುರ ತಾಲೂಕಿನ ವಿವಿಧೆಡೆ ಕಾರ್ಯಾಚರಣೆ ನಡೆಸಿ ಗ್ಯಾರೇಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಬಾಲಕಾರ್ಮಿಕನನ್ನು ರಕ್ಷಣೆ ಮಾಡಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಸಿಬ್ಬಂದಿ ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಸ್ಥಳಗಳಲ್ಲಿ ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿ ನಡೆಸಿದರು.ಈ ತಪಾಸಣೆ ವೇಳೆ ಗ್ಯಾರೇಜ್ವೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಒಬ್ಬ ಬಾಲಕನನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಿದರು.
ಸಿಬ್ಬಂದಿಯಿಂದ ಜಾಗೃತಿ:
ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಮಾಂಸಮಾರಾಟ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬುದನ್ನು ಮನದಟ್ಟು ಮಾಡಲಾಯಿತು.
14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 2 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು 50 ಸಾವಿರ ರೂಪಾಯಿವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.