ಜಿಲ್ಲೆ

ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪಣ

ಗೋಪಾಲಕೃಷ್ಣ ಪಾದೂರ್

ಉಡುಪಿ: ಬಾಲಕಾರ್ಮಿಕ ಪದ್ಧತಿ ತಳ ಮಟ್ಟದಲ್ಲಿ ನಿಮೂರ್ಲನೆ ಮಾಡಿ, ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳು ಮಕ್ಕಳು ಬಾಲ್ಯಾವ್ಯವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರಾಗುತ್ತಾರೆ. ಒತ್ತಾಯ ಪೂರ್ವಕವಾಗಿ ಮಕ್ಕಳು ದುಡಿಮೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಮುಂದೆ ಸಮಾಜಘಾತುಕ ವ್ಯಕ್ತಿಯಾಗಿ ಬದಲಾಗುವ ಸಾಧ್ಯತೆಗಳಿರುತ್ತದೆ ಎಂದರು.

ಜಿಲ್ಲೆಯಲ್ಲಿ ಪತ್ತೆಯಾದ ಬಾಲ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸುವುದರೊಂದಿಗೆ ವಿದ್ಯಾಭ್ಯಾಸ ಸೇರಿದಂತೆ ಮತ್ತಿತರರು ಅವಕಾಶ ಕಲ್ಪಿಸಿಕೊಡಲಾಗಿದೆ. ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು ಪೂರಕ ವಾತಾವರಣ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹಾಗೂ ಜಿಲ್ಲಾ ಪೊಲೀಸ್​ ಅಧೀಕ್ಷಕ ಹರಿರಾಮ ಶಂಕರ ಮಾತನಾಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್​ ಷಾ ಅಲ್ತಾಫ್​ ಅಹಮದ್​ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈಕುಂಠ ಬಾಳಿಕಾ ಕಾನೂನು ವಿದ್ಯಾಲಯದ ಪ್ರಾಧ್ಯಾಪಕ ಹಾಗೂ ವಕೀಲ ರಾಯಲ್​ ಫರ್ನಾಂಡೀಸ್​ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಹಿರಿಯ ಸಿವಿಲ್​ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್​ ಪಿ.ಆರ್​. ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್​ ವಿ ನಾಯಕ್​, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಸ್ವಾಗತಿಸಿ, ಪ್ರಶಾಂತ್​ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.