ಜಿಲ್ಲೆ

40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ

ಶಿವರಾಜ.ಎಂ

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಹೋಟೆಲ್, ಗ್ಯಾರೇಜ್, ವಾಣಿಜ್ಯ ಸಂಸ್ಥೆ, ಕಾರ್ಖಾನೆಗಳ ಮೇಲೆ ಕಾರ್ಮಿಕ ಇಲಾಖೆ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ಮತ್ತು ದಾಳಿ ನಡೆಸಿ ಮೂವರು ಬಾಲ ಕಾರ್ಮಿಕರು ಹಾಗೂ 37 ಕಿಶೋರ ಕಾರ್ಮಿಕರು ಸೇರಿ 40 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಹಮ್ಮಿಕೊಂಡಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪ್ರತಿ ತಿಂಗಳು ಅನಿರೀಕ್ಷಿತ ದಾಳಿ ಹಾಗೂ ತಪಾಸಣೆ ಕಾರ್ಯ ನಿರಂತರವಾಗಿ ನಡೆಯುತ್ತಿರುವುದರಿಂದ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ತಡೆಗೆ ಹೆಚ್ಚು ಅನುಕೂಲವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿ ಹೆಚ್ಚು ಗಮನ ನೀಡುತ್ತಿರುವುದು ಸ್ವಾಗತಾರ್ಹವಾಗಿದೆ ಎಂದರು. ಅಧಿಕಾರಿಗಳು ಮುಂದಿನ ದಿನಗಳಲ್ಲಿ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಸೂಚಿಸಿದರು.

ಕಾನೂನು ಕ್ರಮದ ಎಚ್ಚರಿಕೆ: ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ನಿರಂತರವಾಗಿ ಹೋಟೆಲ್, ಗ್ಯಾರೇಜ್, ಬೇಕರಿ, ವಾಣಿಜ್ಯ ಸಂಸ್ಥೆ, ಕೈಗಾರಿಕೆ ಮುಂತಾದ ಸ್ಥಳಗಳಿಗೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗುತ್ತಿದೆ. ಆದರೂ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಚಾಳಿ ಮುಂದುವರೆದಿದೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು, ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಸಂಬಂಧಪಟ್ಟ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಬಗ್ಗೆ ಅಧಿಕಾರಿಗಳು ಮಾಲೀಕರಿಗೆ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶಿಸಿದರು. ಅಧಿಕಾರಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು, ಸಾರ್ವಜನಿರೂ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಕಾರ್ಖಾನೆ ಅಥವಾ ಅಂಗಡಿ ಮುಂಗಟ್ಟುಗಳಲ್ಲಿ ಮಕ್ಕಳನ್ನು ದುಡಿಮೆಗೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಬೇಕು ಎಂದು ತಿಳಿಸಿದರು.

1 ರಿಂದ 3 ವರ್ಷ ಜೈಲು: ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹವರಿಗೆ ಕನಿಷ್ಠ 6 ತಿಂಗಳಿಂದ ಮತ್ತು ಗರಿಷ್ಠ 2 ವರ್ಷದವರೆಗೂ ಜೈಲು ಶಿಕ್ಷೆ ಅಥವಾ 20 ಸಾವಿರ ರೂ. ಗಳಿಂದ 50 ರೂಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಡಿಸಿ ತಿಳಿಸಿದರು.

11 ಪ್ರಕರಣ ದಾಖಲು: 2024-25 ನೇ ಸಾಲಿನಲ್ಲಿ 03 ಬಾಲ ಹಾಗೂ 37 ಕಿಶೋರ ಕಾರ್ಮಿಕರು ಸೇರಿ 40 ಮಕ್ಕಳ ರಕ್ಷಣೆ ಮಾಡಲಾಗಿದ್ದು 11 ಪ್ರಕರಣಗಳಲ್ಲಿ 2.20 ಲಕ್ಷ ರೂ.ಗಳ ದಂಡ ವಸೂಲಾತಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ತಿಳಿಸಿದ್ದಾರೆ. ರಕ್ಷಣೆ ಮಾಡಿದ ಬಾಲಕಾರ್ಮಿಕರನ್ನು ಇಲಾಖೆಯ ನಿಯಮದಂತೆ ಬಾಲಕೇಂದ್ರಗಳಿಗೆ ದಾಖಲಿಸಿ ಮುಂದಿನ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪ್ರತಿ ತಿಂಗಳು ತಪಾಸಣಾ ಕಾರ್ಯ ನಡೆಸಲಾಗುತ್ತಿದೆ, ಎಲ್ಲಿಯಾದರೂ ದೂರು ಕೇಳಿಬಂದರೆ ತಕ್ಷಣ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.