ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ಬಾಲಕಾರ್ಮಿಕರ ರಕ್ಷಣಾ ಕಾರ್ಯ ಮುಂದುವರೆಸಿರುವ ಜಿಲ್ಲಾ ಕಾರ್ಮಿಕರ ಇಲಾಖೆ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಶಿಕ್ಷಣ ಇಲಾಖೆ ಜಂಟಿಯಾಗಿ ದೇವನಹಳ್ಳಿ ತಾಲೂಕು ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿ ನಡೆಸುವ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪತ್ತೆಯಾದ ನಾಲ್ವರು ಬಾಲಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕೂ ತಾಲೂಕುಗಳಲ್ಲಿ ದಾಳಿ: ಕಳೆದೊಂದು ತಿಂಗಳಿಂದ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಕಾರ್ಮಿಕರ ಇಲಾಖೆ ಹಲವು ಬಾಲಕಾರ್ಮಿಕರನ್ನು ರಕ್ಷಣೆ ಮಾಡಿ ಸಂಬಂಧಪಟ್ಟ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ರಕ್ಷಣೆ ಮಾಡಿದ ಬಾಲಕರನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿ ಬಳಿಕ ಮಕ್ಕಳ ಕಲ್ಯಾಣ ಇಲಾಖೆ ಮುಂದೆ ಹಾಜರುಪಡಿಸಿ ಮುಂದಿನ ಕ್ರಮವಹಿಸುತ್ತಿದ್ದಾರೆ.
ಮಾಲೀಕರಿಗೆ ಎಚ್ಚರಿಕೆ: ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಮಾಂಸ ಮಾರಾಟದ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 2 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಮನವಿ: ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರ ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.
ದೊಡ್ಡ ಕಡೆ ದಾಳಿ ಏಕಿಲ್ಲ?
ಕಾರ್ಮಿಕ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದ್ದರೂ, ಜನಪ್ರತಿನಿಧಿಗಳಿಂದ ಅಪಸ್ಪರ ಕೇಳಿಬರುತ್ತಿದೆ. ಗ್ಯಾರೇಜ್, ಬೇಕರಿಯಂತ ಸಣ್ಣಪುಟ್ಟ ಕಡೆಗಳಲ್ಲಿ ದಾಳಿ ನಡೆಸುತ್ತಿರುವ ಅಧಿಕಾರಿಗಳು ದೊಡ್ಡ ಉದ್ಯಮಗಳತ್ತ ತಲೆ ಹಾಕುತ್ತಿಲ್ಲ. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿನ ಹಲವು ಕಸ ಘಟಕಗಳಲ್ಲಿ ಹಲವು ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಆದರೆ ಇಂಥ ಕಡೆಗಳಲ್ಲಿ ದಾಳಿ ನಡೆಸುವುದಿಲ್ಲ, ದಾಳಿ ನಡೆಸಿದರೂ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದಾರೆ ಹೊರತು ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಲು ಮೀನಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚಿಗೆ ದೇವನಹಳ್ಳಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ದೊಡ್ಡಬಳ್ಳಾಪುರದ ಶಾಸಕ ಧೀರಜ್‌ಮುನಿರಾಜು ನೇರವಾಗಿಯೇ ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಕಸದ ಘಟಕಗಳಲ್ಲಿ ಬಾಲಕಾರ್ಮಿಕರ ಇರುವುದರು ದೃಢಪಟ್ಟರೂ ಮಾಲೀಕರ ಮೇಲಾಗಲಿ ಅಥವಾ ಸಂಬಂಧಪಟ್ಟವರ ವಿರುದ್ಧವಾಗಲಿ ಇದುವರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಈ ಬಗ್ಗೆ ಅಧಿಕಾರಿಗಳು ಮೃದುಧೋರಣೆ ತಾಳಲು ಕಾರಣವೇನು ಎಂದು ಕಿಡಿಕಾರಿದ್ದರು.
.