ಜಿಲ್ಲೆ

ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಪುನಃ ದಾಖಲು ಮಾಡಿ: ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ಎ.ಶೆಟ್ಟಿ ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಶಾಲೆಯಿಂದ ಮಕ್ಕಳು ಹೊರಗುಳಿದಾಗ ಬಾಲ್ಯವಿವಾಹಕ್ಕೆ ಪ್ರೇರಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಇಂತಹ ಪ್ರಕರಣ ಗಮನಿಸಿ ಪಾಲಕರಿಗೆ ಮನವರಿಕೆ ಮಾಡಿ ಮಕ್ಕಳನ್ನು ಪುನಃ ಶಾಲೆಗೆ ದಾಖಲಿಸುವ ಕೆಲಸವಾಗಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ಎ.ಶೆಟ್ಟಿ ಸೂಚನೆ ನೀಡಿದರು.

ನಗರದ ಗಾಂಧಿಭವನದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ, ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಬಲವರ್ಧನೆ ಕುರಿತು ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು ನಡೆದಾಗ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಅದರಂತೆ ಅಧಿಕಾರಿಗಳು ಕೂಡ ತಕ್ಷಣ ಕಾರ್ಯ ಪ್ರೌವೃತ್ತರಾಗಬೇಕು. ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಮಂಡ್ಯ ಜಿಲ್ಲೆ ಮೊದಲನೆಯದಾಗಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಶೈಕ್ಷಣಿಕವಾಗಿ ಹೆಚ್ಚಿನ ಪ್ರಮಾಣವಿರುವ ಹಳೇ ಮೈಸೂರಿನ ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಾಲ್ಯವಿವಾಹ ವಾಗುತ್ತಿದೆ. ಈ ಕುರಿತು ಗಂಭೀರವಾದ ಚಿಂತನೆಯ ಅಗತ್ಯವಿದೆ. ಅಪ್ರಾಪ್ತ ವಯಸ್ಸಿನಲ್ಲಿ ಮದುವೆಯಾಗಿ ಹೆಣ್ಣು ಮಗಳು ತಾಯಿಯಾದಾಗ, ಹೆರಿಗೆ ಸಮಯದಲ್ಲಿ ತೀವ್ರ ತೊಂದರೆ, ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಅಲ್ಲದೇ ಪ್ರಸೂತಿ ವೈದ್ಯರಿಗೆ ಇದು ಸವಾಲಾಗಿ ಪರಿಣಮಿಸುತ್ತದೆ. ನಂತರದ ದಿನಗಳಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಿಲ್ಲಾಡಳಿತದ ಜತೆಗೆ ಸಾರ್ವಜನಿಕರು ಹಾಗೂ ಸಂಘಟನೆಗಳು ಸಹಕರಿಸಿ ಬಾಲ್ಯವಿವಾಹವನ್ನು ತಡೆಗಟ್ಟಬೇಕಿದೆ. ಗ್ರಾಮ ಮಟ್ಟದಲ್ಲಿ ಶಾಲೆಯ ಶಿಕ್ಷಕರು ಬಾಲ್ಯ ವಿವಾಹದ ಬಗ್ಗೆ ಸಾರ್ವಜನಿಕರಿಕೆ ಅರಿವು ಮೂಡಿಸಿಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಡಿಡಿಪಿಐ ಶಿವರಾಮೇಗೌಡ, ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ.ಲೋಕೇಶ್, ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ಇತರರಿದ್ದರು.