ಜಿಲ್ಲೆ

ಸಿಪೆಟ್‌ನಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟನೆ

ಸದೇಶ್ ಕಾರ್ಮಾಡ್

ಮೈಸೂರು: ಸಮಾಜದಲ್ಲಿ ಅವಕಾಶ ವಂಚಿತ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿ ದ್ದು, ವಿದ್ಯಾರ್ಥಿಗಳು ನಿಶ್ಚಿಂತೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಹೇಳಿದರು.

ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ 6.75 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 250 ಹಾಸಿಗಳ ಸಾಮರ್ಥ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯವನ್ನು ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಿದರು.

ಹಳ್ಳಿಗಾಡಿನಿಂದ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದ ಸೌಲಭ್ಯಗಳು ದೊರೆಯದೆ ಇದ್ದರೆ ಅವರು ವಿದ್ಯಾಭ್ಯಾಸವನ್ನು ಅರ್ಧದಲ್ಲಿ ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿರುತ್ತದೆ. ಈ ಸಮಸ್ಯೆಯನ್ನು ಅರಿತು ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ. ವಿದ್ಯಾರ್ಥಿ ನಿಲಯಗಳ ನಿರ್ಮಾಣದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ನಿಶ್ಚಿಂತೆಯಿಂದ ಪೂರೈಸಲು ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ದೇಶದ ಭವಿಷ್ಯವಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯಾಭ್ಯಾಸ ದೊರೆಯಬೇಕು. ಈ ನಿಟ್ಟಿನಲ್ಲಿ ಉತ್ತಮ ವಿದ್ಯಾ ಕೇಂದ್ರಗಳು ಹಾಗೂ ವಿದ್ಯಾರ್ಥಿನಿಲಯಗಳ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಆಡಳಿತದಲ್ಲಿ ಶಿಕ್ಷಣ, ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಅದ್ಭುತವಾದ ಕಾರ್ಯಗಳು ನಡೆಯುತ್ತಿದೆ. ದೇಶದ ಪ್ರತಿಯೊಬ್ಬರನ್ನು ಅಭಿವೃದ್ಧಿಯಲ್ಲಿ ಒಟ್ಟಿಗೆ ಕರೆದೊಯ್ಯುವ ಕಾರ್ಯವನ್ನು ಮಾಡುತ್ತಿದ್ದಾರೆ. ಆ ಮೂಲಕ ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವತ್ತ ಹೆಜ್ಜೆ ಇರಿಸಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಸಿಪೆಟ್ ನಿರ್ದೇಶಕ ಆರ್.ಟಿ. ನಾಗರಹಳ್ಳಿ, ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಲಿಂಗರಾಜು, ಹೆಬ್ಬಾಳ್ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್ ಗೌಡ ಇದ್ದರು.