ಜಿಲ್ಲೆ

ಶುದ್ಧ ನೀರಿನ ಘಟಕಗಳ ನಿರ್ಲಕ್ಷ್ಯ ಸಲ್ಲ

Belagavi

ಬೆಳಗಾವಿ: ಸರ್ಕಾರ ಹಳ್ಳಿಗಳಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ನಿರ್ಮಿಸಿದ್ದರೂ ಜನರಿಗೆ ಪ್ರಯೋಜನವಾಗುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಬೇಸರ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ, ನೀರು ಶುದ್ಧೀಕರಣ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ನೀರು ಇದ್ದರೆ ವಿದ್ಯುತ್ ಸಂಪರ್ಕ ಇಲ್ಲ. ಮತ್ತೊಂದೆಡೆ ನೀರಿನ ಸಂಪರ್ಕವೇ ಇಲ್ಲದಿರುವ ಕುರಿತು ಸಾರ್ವಜನಿಕರು ನೀಡಿದ ದೂರಿನಿಂದ ಬೆಳಕಿಗೆ ಬಂತು. ಈ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷೆ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯಲ್ಲಿ 1326 ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿದೆ. ಅದರಲ್ಲಿ ಬೆಳಗಾವಿ ವಿಭಾಗದಲ್ಲಿ ಒಟ್ಟು 615 ಘಟಕ ಹಾಕಲಾಗಿದ್ದು, 519 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಚಿಕ್ಕೋಡಿ ವಿಭಾಗದಲ್ಲಿ 711 ಘಟಕ ಅಳವಡಿಸಲಾಗಿದ್ದು ಅದರಲ್ಲಿ 546 ಘಟಕ ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ವಾಸ್ತವ್ಯದಲ್ಲಿ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದರು.

104 ಕರೆ: ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಭಾಗಗಳಿಂದ 104 ಜನರು ದೂರವಾಣಿ ಕರೆ ಮಾಡಿ ತಮ್ಮ ಗ್ರಾಮದಲ್ಲಿನ ಶುದ್ಧ ನೀರಿನ ಘಟಕಗಳ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಗಿತಗೊಂಡಿರುವ ಘಟಕಗಳನ್ನು ಸರ್ಕಾರದ ಸುತ್ತೋಲೆಯಂತೆ ಜ. 28 ರೊಳಗೆ ದುರಸ್ತಿ ಮಾಡಿ ಶುದ್ಧ ನೀರು ಪೂರೈಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅದರಂತೆ ಜಿಲ್ಲೆಯಲ್ಲಿ ಜ. 25ರೊಳಗೆ ಎಲ್ಲ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮವಹಿಸಲಾಗುವುದು ಎಂದು ಜಿಪಂ ಅಧ್ಯಕ್ಷೆ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಅಧಿಕಾರಿಗಳು ಗೈರು

ನಗರದ ಜಿಪಂ ಕಟ್ಟಡದಲ್ಲಿರುವ ಅಧ್ಯಕ್ಷರ ಕೊಠಡಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಗೈರು ಹಾಜರಾತಿ ಎದ್ದು ಕಾಣುತಿತ್ತು. ಫೋನ್ ಇನ್ ಕಾರ್ಯಕ್ರಮ ನಡೆಸುವ ಕುರಿತು ಅಧ್ಯಕ್ಷರು ಯಾವುದೇ ಮಾಹಿತಿಯನ್ನು ಜಿಪಂ ಕಚೇರಿಯ ಸಿಬ್ಬಂದಿ, ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಹಾಗಾಗಿ ಎಲ್ಲ ವಿಭಾಗದ ಹಿರಿಯ ಅಧಿಕಾರಿಗಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಅಧಿಕಾರಿಗಳು ಮತ್ತು ಅಧ್ಯಕ್ಷರ ನಡುವೆ ಸಮನ್ವಯ ಕೊರತೆ ಉಂಟಾಗಿರುವುದೂ ಕಂಡುಬಂತು.

ಗ್ರಾಪಂಗಳ ನಿರ್ಲಕ್ಷೃದಿಂದಲೇ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಾರ್ವಜನಿಕರ ದೂರುಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರಿಂದ ಪೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಈ ಬಗ್ಗೆ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡಿದ್ದರು.ಆಶಾ ಐಹೊಳೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ