ತೀರ್ಥಹಳ್ಳಿ: ಹೊಸ ದೇವಸ್ಥಾನಗಳನ್ನು ನಿರ್ಮಿಸಿ ಜನರ ಭಾವನೆಗಳನ್ನು ಕೆರಳಿಸಿ, ಸಮಸ್ಯೆಗಳನ್ನು ಸೃಷ್ಟಿಸುವ ಬದಲು ಇರುವ ದೇವಸ್ಥಾನಗಳನ್ನೇ ಪುನಶ್ಚೇತನಗೊಳಿಸುವುದು ಉತ್ತಮ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪಟ್ಟಣದ ತುಂಗಾ ನದಿ ತೀರದಲ್ಲಿರುವ ಶ್ರೀ ಕೋದಂಡರಾಮ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಟ್ಟಣದ ಮಧ್ಯ ಭಾಗದಲ್ಲಿರುವ ಮೂರು ಶತಮಾನಗಳ ಹಿಂದಿನ ಶ್ರೀರಾಮನ ಈ ದೇವಸ್ಥಾನ ಸೂಕ್ತ ನಿರ್ವಹಣೆ ಇಲ್ಲದೆ ಆಲಯದ ಸುತ್ತಲೂ ಗಿಡಗಂಟಿಗಳು ಬೆಳೆದಿವೆ. ಈ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಸುಣ್ಣ, ಬಣ್ಣಗಳಿಂದ ಅಲಂಕಾರಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವುದರಿಂದ ಜ.22ರಂದು ಈ ದೇವಸ್ಥಾನದಲ್ಲಿಯೂ ವಿಶೇಷ ಪೂಜೆ ಆಯೋಜಿಸಲಾಗಿದೆ. ತುಂಗಾ ನದಿ ತೀರದ ಸುಂದರ ವಾತಾವರಣದ ನಡುವೆ ಪುರಾಣ ಪ್ರಸಿದ್ಧವಾದ ರಾಮೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಈ ದೇವಸ್ಥಾನ ಸುಂದರ ಶಿಲ್ಪಗಳನ್ನು ಹೊಂದಿದೆ. ಶ್ರೀ ಕೋದಂಡರಾಮ ದೇವಸ್ಥಾನದ ಅಭಿವೃದ್ಧಿ 2 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪಪಂ ಅಧ್ಯಕ್ಷೆ ಗೀತಾ ರಮೇಶ್, ಡಿ.ಎಸ್.ವಿಶ್ವನಾಥ ಶೆಟ್ಟಿ, ಬಂಡೆ ವೆಂಕಟೇಶ್, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಗಣಪತಿ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ರತ್ನಾಕರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಅಮ್ರಪಾಲಿ ಸುರೇಶ್ ಇತರರಿದ್ದರು.