ವಿಜಯವಾಣಿ ಸುದ್ದಿಜಾಲ ಉಡುಪಿ
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘವು ಜಿಲ್ಲಾ ಮಟ್ಟದ ಕ್ರೀಡಾಕೂಟ ಹಮ್ಮಿಕೊಂಡಿರುವುದು ನಿಜಕ್ಕೂ ಅಭಿನಂದನೀಯ ಕಾರ್ಯ. ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಶ್ರಮದಿಂದ ಪ್ರತಿವರ್ಷವೂ ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ಪ್ರಥಮ ಸ್ಥಾನ ಗಳಿಸುತ್ತಿದೆ. ಅದರಂತೆ ತಮ್ಮ ಪ್ರೋತ್ಸಾಹದಿಂದಲೇ ಕ್ರೀಡಾ ಕ್ಷೇತ್ರದಲ್ಲೂ ಸಹ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ ಮೆರೆಯಲಿ. ಉಡುಪಿ ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಲಿ ಎಂದು ಕಾಂಚನ್ ಹುಂಡೈ ಉಡುಪಿಯ ಮಾಲೀಕ ಪ್ರಸಾದರಾಜ್ ಕಾಂಚನ್ ಆಶಿಸಿದರು.
ಉಡುಪಿಯ ಅಜ್ಜರಕಾಡುನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಹಾಗೂ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆದಿದ್ದ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟ ಕ್ರೀಡಾಕೂಟದಲ್ಲಿ ಗುರುವಾರ ಆಯೋಜಿಸಿದ್ದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ನಿಕಟಪೂರ್ವ ಅಧ್ಯಕ್ಷ ವರ್ಗೀಸ್ ಪಿ., ಪ್ರಾಂಶುಪಾಲರ ಸಂಘದ ಖಜಾಂಚಿ ಹರಿಪ್ರಸಾದ್, ಶಾಲಾ ಶಿಕ್ಷಣ ಇಲಾಖೆ (ಪ.ಪೂ.)ಯ ಜಿಲ್ಲಾ ಕ್ರೀಡಾ ಸಂಯೋಜಕ ದಿನೇಶಕುಮಾರ್, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಅಧ್ಯಕ್ಷ ಸತೀಶ್ ಹೆಗ್ಡೆ, ಸಾಂಸ್ಕೃತಿಕ ಸಂಚಾಲಕ ಜಗದೀಶ್ ನಾವುಡ ಇನ್ನಿತರರು ಪಾಲ್ಗೊಂಡಿದ್ದರು.
ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಕ್ರೀಡಾ ಸಂಚಾಲಕ ಸಂತೋಷ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಂಜುನಾಥ್ ಭಟ್ ವಂದಿಸಿದರು. ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ವಿಜಯಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಎರಡು ದಿನಗಳ ಕ್ರೀಡಾಕೂಟದಲ್ಲಿ 24 ಬಗೆಯ ಸ್ಪರ್ಧೆ ನಡೆದಿದ್ದು, ಉಡುಪಿ ಜಿಲ್ಲೆಯ 106 ಕಾಲೇಜುಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಬಾಲಕರ ವಿಭಾಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಹಾಗೂ ಬಾಲಕಿಯರ ವಿಭಾಗದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಸಮಗ್ರ ಪ್ರಶಸ್ತಿ ಗಳಿಸಿತು. ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಂಜುನಾಥ್ ಭಟ್ ಅವರನ್ನು ಉತ್ತಮವಾಗಿ ಕ್ರೀಡಾಕೂಟ ಆಯೋಜನೆ ಮಾಡಿದ್ದರಿಂದ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದವರು ಸನ್ಮಾನಿಸಿ ಗೌರವಿಸಿದರು.