ಮಂಡ್ಯ: ಪ್ರತಿ ವಿದ್ಯಾರ್ಥಿಯಲ್ಲಿ ಒಂದೊಂದು ಪ್ರತಿಭೆ ಅಡಗಿದೆ. ಅದನ್ನು ಗುರುತಿಸಿ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಣ ಇಲಾಖೆ ಮಾಡುತ್ತಿರುವುದು ಮೆಚ್ಚುಗೆಯ ವಿಷಯ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ನಗರದ ಕೆಪಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಮನ್ವಯಾಧಿಕಾರಿಗಳ ಕಚೇರಿ ದಕ್ಷಿಣ ವಲಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಹುಮಾನ ಪಡೆದ ವಿದ್ಯಾರ್ಥಿ ಸಂತಸದಿಂದಿರುತ್ತಾರೆ. ಆದರೆ ಸೋತವರು ಮುಂದಿನ ವರ್ಷ ನಾನು ಕೂಡ ಬಹುಮಾನ ಗಳಿಸಬೇಕೆಂಬ ಛಲವನ್ನು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂದೀಶ್, ಕಾರ್ಯದರ್ಶಿ ಚಂದ್ರಶೇಖರ್, ಎಸ್‌ಡಿಎಂಸಿ ಉಪಾಧ್ಯಕ್ಷ ಕಾಂತರಾಜು, ಶಿಕ್ಷಣ ಇಲಾಖೆಯ ಡಿ.ಕೆ. ನಾಗರಾಜು, ಮಂಜುಳಾ, ಮುಖ್ಯಶಿಕ್ಷಕಿ ಪಾರ್ವತಮ್ಮ ಇತರರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿ ವೇಷ ಧರಿಸಿದ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದರು.