ಜಿಲ್ಲೆ

ಭಾಗಮಂಡಲ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ

ಸುನಿಲ್ ಪೊನ್ನೇಟಿ

ಭಾಗಮಂಡಲ:

ಈ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಜಿಲ್ಲೆಯ ರಸ್ತೆ ಹಾಗೂ ಇತರೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತ್ರಿವೇಣಿ ಸಂಗಮ ಕ್ಷೇತ್ರ ಭಾಗಮಂಡಲದಲ್ಲಿ ಮಡಿಕೇರಿ ಮತ್ತು ತಲಕಾವೇರಿ ಹಾಗೂ ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ನಿರ್ಮಿಸಲಾಗಿರುವ ಜಿಲ್ಲೆಯ ಮೊದಲ ಮೇಲ್ಸೇತುವೆ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಈ ವಿಧಾನಸಭೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಜಯಗೊಳಿಸಿದ ಕೊಡಗಿನ ಜನತೆ ಅಭಿನಂದನಾರ್ಹರು. ಮೊದಲು ಕೊಡಗು ಎಂದರೆ ಬಿಜೆಪಿ ಎನ್ನುವ ವಾತಾವರಣ ಇತ್ತು. ಶಾಸಕರಾದ ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಗೆಲುವು ಸಾಧಿಸುವ ಮೂಲಕ ಇದನ್ನು ಬದಲಿಸಿದ್ದಾರೆ. ಇಬ್ಬರು ಕೂಡ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ತೋರಿಸುತ್ತಿದ್ದಾರೆ. ಇವರ ಯಾವ ಬೇಡಿಕೆಯನ್ನೂ ತಿರಸ್ಕರಿಸುವುದಿಲ್ಲ,

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದೆ. 2013-18ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಆದರೆ 2018ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ತಾನು ನೀಡಿದ್ದ ಭರವಸೆಗಳಲ್ಲಿ ಶೇ.10 ರಷ್ಟನ್ನು ಕೂಡ ಈಡೇರಿಸಲಿಲ್ಲ. ಯಾವ ಪಕ್ಷ ನುಡಿದಂತೆ ನಡೆಯುತ್ತದೆ, ಜನಪರವಾಗಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷ ಎಂಟು ತಿಂಗಳಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದೊಳಗೆ ಈಡೇರಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮ್ಮ ಸರ್ಕಾರ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸಮಾನತೆಯನ್ನು ತರುವ ಪ್ರಯತ್ನ ಮಾಡಲಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ತಲುಪಿಸುವ ವ್ಯವಸ್ಥೆ ಸರ್ಕಾರ ಕಲ್ಪಿಸಿದೆ ಎಂದರು.

ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು. ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳನ್ನು ಈಡೇರಿಸುತ್ತಿದೆ. ಪ್ರತಿ ಸರ್ಕಾರವೂ ತನ್ನ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಸಂವಿಧಾನ ಸ್ವಾತಂತ್ರö್ಯ, ಸಮಾನತೆ, ಭ್ರಾತೃತ್ವವನ್ನು ಸಾರುತ್ತದೆ. ಭ್ರಾತೃತ್ವವನ್ನು ನಾವು ಬೆಳೆಸಬೇಕು. ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಸಮಾಜವನ್ನು ಒಗ್ಗೂಡಿಸುವುದು ನಮ್ಮ ಕರ್ತವ್ಯ. ಮೂಲತಃ ಮನುಷ್ಯರಾಗಿರುವ ನಾವು ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ಅಂತಿಮವಾಗಿ ಜಾತಿ ವ್ಯವಸ್ಥೆ ತೊಲಗಿ ಭಾರತೀಯರಾಗಿ ಬದುಕಬೇಕು. ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಕಾಂಗ್ರೆಸ್ ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದೆ.

ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟç ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟçವನ್ನಾಗಿ ಮಾಡಲು ಆಗುವುದಿಲ್ಲ. ಎಲ್ಲಾ ಧರ್ಮಗಳು, ಜನರು, ಜಾತಿಗಳು ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದು ಹೇಳಲಾಗಿದೆ. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಪ್ರತಿಪಾದಿಸಿದರು.

ಮೈಕ್ರೋಫೈನಾನ್ಸ್ ನಿಂದ ಅನುಭವಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಸದ್ಯದಲ್ಲೇ ಜಾರಿಗೊಳಿಸಲಾಗುವುದು ಎಂದೂ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವÀ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮತ್ತಿತರರು ಈ ಸಂದರ್ಭ ಇದ್ದರು.