ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ವೈ, ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದಿದ್ದಾರೆ.
ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಬಿಎಸ್ವೈ ಮನವಿ ಮಾಡಿದ್ದಾರೆ.
ಘಟನೆ ಹಿನ್ನೆಲೆ ಏನು?
ಶಾಸಕರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗಲಭೆ ನಡೆದಿದೆ.
ಗಲಭೆ ಸಂಬಂಧ 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ಅನೇಕ ವಾಹನಗಳನ್ನು ಜಖಂಗೊಳಿಸಿರುವುದಲ್ಲದೆ, ಬೆಂಕಿ ಇಟ್ಟಿದ್ದಾರೆ. ಪೊಲೀಸರ ಮೇಲೆಯೂ ದೌರ್ಜನ್ಯ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಈಗಾಗಲೇ ಅವಹೇಳನಕಾರಿಯಾದ ಪೋಸ್ಟ್ ಹಾಕಿರುವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಲಭೆ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.