ಜಿಲ್ಲೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ಫೆ. 24ರಂದು

Haveri - Desk - Ganapati Bhat

ಧಾರವಾಡ: ನವಲಗುಂದ ಪಟ್ಟಣಕ್ಕೆ ಫೆ. 24ರಂದು ಆಗಮಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಚಾಲನೆ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಕಾಮಗಾರಿಗಳ ಕುರಿತು ವರದಿ ಸಲ್ಲಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ನವಲಗುಂದ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ 2,000 ಬಡ ಜನತೆಗೆ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ, ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ನವಲಗುಂದ ಪಟ್ಟಣದ ಮಾಡಲ್ ಹೈಸ್ಕೂಲ್ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದರು.

4.50 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಿದ ನೂತನ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆ, ಸಮುದಾಯ ಭವನಗಳ ಉದ್ಘಾಟನೆ, ನವಲಗುಂದ, ಹುಬ್ಬಳ್ಳಿ ಹಾಗೂ ಅಣ್ಣಿಗೇರಿ ತಾಲೂಕುಗಳಲ್ಲಿ ಶಿಕ್ಷಣ ಇಲಾಖೆ ವಿವೇಕ ಯೋಜನೆಯಡಿ ನಿರ್ವಿುಸಿದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ, ಪದವಿ ಕಾಲೇಜುಗಳ 35 ಕೊಠಡಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ, 15ಕ್ಕೂ ಹೆಚ್ಚು ಅಂಗನವಾಡಿ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮವನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ರೂಪಿಸಬೇಕು. ತಹಸೀಲ್ದಾರ್ ನೇತೃತ್ವದಲ್ಲಿ ತಾಲೂಕು ಮಟ್ಟದ ವಿವಿಧ ಸಮಿತಿಗಳನ್ನು ರಚಿಸಿ, ಕಾರ್ಯ ಹಂಚಿಕೆ ಮಾಡಬೇಕು ಎಂದು ಸೂಚಿಸಿದರು.

ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಪಂ ಸಿಇಒ ಸ್ವರೂಪ ಟಿ.ಕೆ., ಎಸ್ಪಿ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳು, ಇತರರು ಇದ್ದರು.