dc meeting 
ಜಿಲ್ಲೆ

ನೆಲಮಂಗಲದತ್ತ ರಾಜ್ಯ ಸರ್ಕಾರದ ಚಿತ್ತ

ಶಿವರಾಜ.ಎಂ

ಮಾ.4ರಂದು ಸಿಎಂ ಆಗಮನ

ಅಂಬೇಡ್ಕರ್ ಕ್ರೀಡಾಂಗಣ ಸಜ್ಜು


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಂತೆ ನಗರೀಕರಣದತ್ತ ವೇಗವಾಗಿ ಬೆಳೆಯುತ್ತಿರುವ ನೆಲಮಂಗಲದತ್ತ ರಾಜ್ಯ ಸರ್ಕಾರ ಚಿತ್ತ ಹರಿಸಿದೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಜತೆಗೆ ಕೆಲವೊಂದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲು ಸಿಎಂ ಸಿದ್ದರಾಮಯ್ಯ ಮಾ.4ರಂದು ನೆಲಮಂಗಲಕ್ಕೆ ಆಗಮಿಸುತ್ತಿದ್ದು, ತಾಲೂಕು ಕಾಂಗ್ರೆಸ್ಸಿಗರಲ್ಲಿ ಸಂಚಲನ ಮೂಡಿಸಿದೆ. ನೆಲಮಂಗಲದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲಾಡಳಿತ ಕಾರ್ಯಕ್ರಮದ ರೂಪುರೇಷೆ ಸಿದ್ಧತೆಯಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡಮಟ್ಟದ ಕಾರ್ಯಕ್ರಮಗಳಿಗೆ ನೆಲಮಂಗಲ ಸಾಕ್ಷಿಯಾಗುತ್ತಿದೆ. ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿ 243 ಎಂಎಲ್‌ಡಿ ನೀರನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 70 ಕೆರೆಗಳಿಗೆ ನೀರು ತುಂಬಿಸುವ 1,081 ಕೋಟಿ ರೂ.ವೆಚ್ಚದ ಮೊದಲನೇ ಹಂತದ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದು, ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಭಿವೃದ್ಧಿಗೆ ಒತ್ತು ಕಳೆದೆರಡು ಅವಧಿಯಲ್ಲಿ ಜೆಡಿಎಸ್ ತೆಕ್ಕೆಯಲ್ಲಿದ್ದ ನೆಲಮಂಗಲ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಾಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಎದುರಿಸಲು ನೆಲಮಂಗಲ ಕ್ಷೇತ್ರ ಮುಖ್ಯವಾಗಿರುವುದರಿಂದ ಸರ್ಕಾರ, ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಲು ಮುಂದಾಗಿದೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.

ಅಗತ್ಯ ಸಿದ್ಧತೆಗೆ ಜಿಲ್ಲಾಡಳಿತ ಸಭೆ ಮಾ.4ರಂದು ನೆಲಮಂಗಲ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದೇವನಹಳ್ಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಿಎಂ ಕಾರ್ಯಕ್ರಮ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. 70 ಕೆರೆಗಳಿಗೆ ನೀರು ತುಂಬಿಸುವ ಮೊದಲನೇ ಹಂತದ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸುವ ಜತೆಗೆ, ನೆಲಮಂಗಲ ತಾಲೂಕಿನಲ್ಲಿ ಕೈಗೊಂಡಿರುವ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಕೆಲವೊಂದು ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ಅಗತ್ಯ ಸಿದ್ಧತೆ ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಹಿತಿ ನೀಡಿ: ಶಿಷ್ಟಾಚಾರದಂತೆ ನಾಲ್ಕು ಜಿಲ್ಲೆಗಳನ್ನು ಪ್ರತಿನಿಧಿಸುವ ಆಮಂತ್ರಣ ಪತ್ರಿಕೆ ಸಿದ್ಧಪಡಿಸಿ, ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್ ಇಲಾಖೆ, ಕೆಪಿಟಿಸಿಎಲ್ನ ಕಾಮಗಾರಿಗಳ
ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಸಂಪೂರ್ಣ ವಿವರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇನ್ನಿತರ ಇಲಾಖೆಗಳ ಯಾವುದಾದರು ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಇದ್ದಲ್ಲಿ ತಕ್ಷಣ ಮಾಹಿತಿ ನೀಡಬೇಕು. ಕಾರ್ಯಕ್ರಮದ ವೇಳೆ ಯಾವುದೇ ಗೊಂದಲವಾಗಬಾರದು ಎಂದು ಸೂಚನೆ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾವಣೆಯಾಗುವುದರಿಂದ ಪೊಲೀಸ್ ಬಂದೋಬಸ್ತ್ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.