ಮೈಸೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಇನ್ನೂ ವಾಪಸ್ ಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಕವಲಂದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೋ ಒಬ್ಬರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ವಾಪಾಸ್ ಬಗ್ಗೆ ಯೋಚನೆ ಮಾಡಿದ್ದೀವಿ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್; ಸಿಎಂ ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ: ಬಸನ್ಗೌಡ ಪಾಟೀಲ್ ಯತ್ನಾಳ್
ಇತ್ತ ಹಿಜಾಬ್ ನಿಷೇಧದ ಆದೇಶ ವಾಪಸ್ ಪಡೆಯುವ ಕುರಿತು ಸಿಎಂ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರು ಸಹ ಸಿಎಂ ಸಿದ್ದರಾಮಯ್ಯ ಈ ರೀತಿ ಮಾಡಿರುವುದು ಕಾನೂನಿಗೆ ವಿರುದ್ಧವಾದದ್ದು ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು.