ಚಿತ್ರದುರ್ಗ: ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಬೆಂಗಳೂರಲ್ಲಿ ಗುರುವಾರ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ,ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,ಜಿಲ್ಲೆಯ ನಾನಾ ಶಾಸಕರಿದ್ದ ಸಭೆಯಲ್ಲಿ,ಯುಜಿಡಿ ಯೋಜನೆಗೆ ತುರ್ತಾಗಿ ಅನುದಾನವನ್ನು ಒದಗಿಸುವಂತೆ ಕೋರಿ ಸಲ್ಲಿಸಿದ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ,ಅನುದಾನದ ಭರವಸೆ ನೀಡಿದ್ದಾರೆ.
ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿರುವಂತೆ ಪರಶುರಾಂಪುರವನ್ನು ತಾಲೂಕು ಕೇಂದ್ರವನ್ನಾಗಿ ಮಾಡ ಬೇಕೆಂಬ ಕೋರಿ ಕೆಗೂ ಸಿಎಂ ಸ್ಪಂದಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಸಲು ಮನವಿ ಮಾಡಿದ್ದೇವೆ ಎಂದರು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ ಬೇಡ,ಸಾರ್ವಜನಿಕರಿಗೆ ಸಾಕಷ್ಟು ಅನಾನುಕೂಲವಾಗುತ್ತದೆ. ಹೊರವಲಯದಲ್ಲಿ ಈಗ ನಿರ್ಮಿಸುತ್ತಿರುವ ನೂತನ ಕಟ್ಟಡವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ನೀಡವ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ವೈದ್ಯಕೀಯ ಶಿಕ್ಷಣ,ಕಂದಾಯ ಸಚಿವರು,ಜಿಲ್ಲಾ ಸಚಿವರು ಮತ್ತು ಶಾಸಕರು ಜತೆ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರುವುದಾಗಿ ಸಿಎಂ ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತಂತೆ ಎಲ್ಲ ವಿಚಾರಗಳನ್ನು ಸಿಎಂ ಗಮನಕ್ಕೆ ತರಲಾಗಿದ್ದು,ಎಲ್ಲ ಬೇಡಿಕೆಗಳಿಗೂ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ರಘುಮೂರ್ತಿ ಹೇಳಿದ್ದಾರೆ. ಶಾಸಕರಾದ ಬಿ.ಜಿ.ಗೋವಿಂದಪ್ಪ,ಕೆ.ಸಿ.ವೀರೇಂದ್ರ ಪಪ್ಪಿ ಇದ್ದರು.
---