ಹುಬ್ಬಳ್ಳಿ: ಧಾರವಾಡ ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ವತಿಯಿಂದ ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಸಂಪರ್ಕ ಸಭೆ ಏರ್ಪಡಿಸಲಾಗಿತ್ತು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ. ನಂಜನಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಹಳಷ್ಟು ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸಹಕಾರಿಗಳು ಕಾನೂನು, ಸುತ್ತೋಲೆ, ಉಪವಿಧಿ ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿದಲ್ಲಿ ಉತ್ತಮ ಸಹಕಾರಿಯಾಗಲು ಸಾಧ್ಯ. ಕಲಂ 18ರಂತೆ ಹೂಡಿಕೆ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಜಿಲ್ಲಾ ನಿರ್ದೇಶಕ ಮಲ್ಲಿಕಾರ್ಜುನ ಹೊರಕೇರಿ ಮಾತನಾಡಿ, ಧಾರವಾಡ ಜಿಲ್ಲೆಯು ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಸಹಕಾರಿಗಳು ಠೇವಣಿದಾರರ ಹಿತ ಕಾಪಾಡಬೇಕೆಂದು ಹೇಳಿದರು.
96 ಸೌಹಾರ್ದ ಸಹಕಾರಿ ಸಂಘಗಳಿಂದ 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಧಾರವಾಡ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಅಧ್ಯಕ್ಷ ಗುರುಪಾದಪ್ಪ ಢಂಗೆ, ವಿ.ಡಿ. ಕಾಮರಡ್ಡಿ, ರವೀಂದ್ರ ಯಲಿಗಾರ, ಬಸವರಾಜ ಹೊಂಗಲ ಇತರರು ಇದ್ದರು.
ಸೌಹಾರ್ದ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಕುಂಬಾರ ಕಾರ್ಯಕ್ರಮ ನಿರೂಪಿಸಿದರು.
ಕಲ್ಮೇಶ ಎಸ್.ಎಂ. ಸ್ವಾಗತಿಸಿದರು.