ಜಿಲ್ಲೆ

ಕುಟುಂಬ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ

Mysuru - Desk - Naveen Kumar H P

ನಂಜನಗೂಡು : ಕಪಿಲಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಬುಧವಾರ ನಂಜನಗೂಡು ತಾಲೂಕಿನ ವಿವಿಧೆಡೆ ಸಂಚರಿಸಿ ತಗ್ಗು ಪ್ರದೇಶದ ಬಡಾವಣೆಗಳನ್ನು ಪರಿಶೀಲಿಸಿದರು.


ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಸ್ನಾನಘಟ್ಟ, ಪರಶುರಾಮ ದೇವಾಲಯ, ಹಳ್ಳದಕೇರಿ ಸೇರಿದಂತೆ ಕೆಲ ತಗ್ಗು ಪ್ರದೇಶದ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಕೇಳಿದರು. ಈ ಸಂದರ್ಭ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಆಗಮಿಸುವ ಭಕ್ತರು ಪುಣ್ಯ ಸ್ನಾನಕ್ಕೆಂದು ನೀರಿಗಿಳಿಯದಂತೆ ಎಚ್ಚರಿಕೆ ವಹಿಸಲು ದೇವಾಲಯದ ಅಧಿಕಾರಿಗಳಿಗೆ ತಿಳಿಸಿದರು.


ಹಳ್ಳದಕೇರಿ ಬಡಾವಣೆಗೆ ಭೇಟಿ ನೀಡಿದ ಲಕ್ಷ್ಮೀಕಾಂತರೆಡ್ಡಿ ಅವರಿಗೆ ಪ್ರವಾಹ ಸಂತ್ರಸ್ತ ಕುಟುಂಬಗಳು ಮನವಿ ಸಲ್ಲಿಸಿದವು. ಕಪಿಲಾ ನದಿಯಲ್ಲಿ ಪ್ರವಾಹ ಉಂಟಾದಾಗ ಮನೆಗಳಿಗೆ ನೀರು ನುಗ್ಗುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ಮನೆ ಅಥವಾ ನಿವೇಶನ ನೀಡುವುದಾಗಿ ಈ ಹಿಂದೆ ಅಧಿಕಾರಿಗಳು ಭರವಸೆ ನೀಡಿದ್ದರು. ಅದು ಈಡೇರಿಲ್ಲ ಎಂದು ಅಳಲು ತೋಡಿಕೊಂಡರು.


ಇನ್ನು ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗಾಗಿ ನಗರದ ಗಿರಿಜಾ ಕಲ್ಯಾಣ ಮಂದಿರದಲ್ಲಿ ಕಾಳಜಿ ಕೇಂದ್ರ ತೆರೆದು ತಕ್ಷಣ ಮುಳುಗಡೆ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲು ಸೂಚನೆ ನೀಡಿದ ಜಿಲ್ಲಾಧಿಕಾರಿ ಅವರು, ಮೂಲಸೌಕರ್ಯ ಕಲ್ಪಿಸಲು ಸೂಚನೆ ನೀಡಿದರು.


ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭೆ ಪೌರಾಯುಕ್ತ ನಂಜುಂಡಸ್ವಾಮಿ, ತಾಲೂಕು ಪಂಚಾಯಿತಿ ಇಒ ರಾಜೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


50 ಸಾವಿರಕ್ಕೆ ಏರಿಕೆ: ಕಬಿನಿ ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಬುಧವಾರ ಸಂಜೆಗೆ 50 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದ್ದು, ಇದರೊಂದಿಗೆ ನುಗು ಅಣೆಕಟ್ಟೆಯಿಂದಲೂ 5 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಮುಂದುವರಿದಿದ್ದು, ನಗರದ ಹಳ್ಳದಕೇರಿ ಬಡಾವಣೆಯಲ್ಲಿ ನಾಲ್ಕು ಮನೆಗಳು ಜಲಾವೃತಗೊಂಡಿವೆ. ಹೀಗಾಗಿ ಸಂತ್ರಸ್ತ ಕುಟುಂಬಗಳನ್ನು ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.