ಮೈಸೂರು: ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಗೊಂದಲಗಳ ವಿರುದ್ಧ ವಿದ್ಯಾರ್ಥಿಗಳು ಗುರುವಾರ ಎಐಡಿಎಸ್‌ಒ ನೇತೃತ್ವದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜುಗಳಲ್ಲಿ ಏಕಾಏಕಿ ಎಲ್ಲ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶಾತಿ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕು ಎಂದು ಆದೇಶ ಹೊರಡಿಸಿದ್ದಾರೆ. ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ 30,000 ರೂ. ಹಾಗೂ ಯುವರಾಜ ಕಾಲೇಜಿನಲ್ಲಿ 30 ರಿಂದ 60 ಸಾವಿರ ರೂ. ಕಟ್ಟುವ ಪರಿಸ್ಥಿತಿಯನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಇನ್ನೂ ದೊರೆತ್ತಿಲ್ಲ. ಏಕಾಏಕಿ ಇಷ್ಟೊಂದು ದೊಡ್ಡ ಮೊತ್ತ ಪಾವತಿಸಲು ಸಾಧ್ಯವಿಲ್ಲ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ನಂತರ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಸುಭಾಷ್, ಚಂದ್ರಕಲಾ, ನಿತಿನ್, ಸ್ವಾತಿ, ಚಂದ್ರಿಕಾ, ಚಂದನ ಹಾಗೂ ಇತರರು ಪಾಲ್ಗೊಂಡಿದ್ದರು.