ಜಿಲ್ಲೆ

ಗಡಿ ಭಾಗದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಬದ್ಧ

ಜಿ.ಹೆಚ್. ಧನ್ಯಕುಮಾರ್

ಕಡೂರು: ಕ್ಷೇತ್ರದ ಗಡಿ ಭಾಗದ ಗ್ರಾಮಗಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಪಂಚನಹಳ್ಳಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ 2 ರೂ.ಕೋಟಿ ವೆಚ್ಚದ ಹೆಚ್ಚುವರಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಬರಗಾಲಕ್ಕೆ ತುತ್ತಾಗುವ ಜನತೆಗೆ ಶಿಕ್ಷಣವೇ ಮುಖ್ಯ ಆಧಾರ. ಇಲ್ಲಿನ ಜನತೆ ಶಿಕ್ಷಣವನ್ನೇ ಹೆಚ್ಚು ಅವಲಂಭಿಸಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಕೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.
ಶೈಕ್ಷಣಿಕ ಅಭಿವೃದ್ಧಿ ಕೇವಲ ಪಟ್ಟಣ ಪ್ರದೇಶಕ್ಕೆ ಸೀಮಿತವಾಗಬಾರದು ಎನ್ನುವ ಕಾರಣಕ್ಕೆ ಗ್ರಾಮೀಣ ಭಾಗದ ಕಾಲೇಜುಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಈಗಾಗಲೇ ಯಗಟಿ ಪ್ರಥಮ ದರ್ಜೆ ಕಾಲೇಜಿಗೆ 5 ಕೋಟಿ ರೂ. ಅನುದಾನ ನೀಡಲಾಗಿದೆ. ಪಂಚನಹಳ್ಳಿ ಪ್ರಥಮ ದರ್ಜೆ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಮತ್ತು ಆಡಿಟೋರಿಯಮ್ ನಿರ್ಮಾಣಕ್ಕೆ 2 ಕೋಟಿ ರೂ. ಜತೆಗೆ 50 ಲಕ್ಷ ಹೆಚ್ಚುವರಿ ಅನುದಾನ ಬಂದಿದೆ. ಶೌಚಗೃಹ ನಿರ್ಮಾಣಕ್ಕೆ 15 ಲಕ್ಷ ರೂ. ಹಣ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ನಲುಗುತ್ತಿವೆ. ಪಾಲಕರು ತಮ್ಮ ಮಕ್ಕಳನ್ನು ಗ್ರಾಮೀಣ ಭಾಗದ ಕಾಲೇಜುಗಳಿಗೆ ಸೇರ್ಪಡೆ ಮಾಡುವ ಮೂಲಕ ಕಾಲೇಜನ್ನು ಉಳಿಸಿಕೊಳ್ಳಬೇಕು. ಇಲ್ಲಿನ ಜನರ ಬೇಡಿಕೆಯಂತೆ ವಿದ್ಯಾರ್ಥಿನಿಯರ ವಸತಿ ನಿಲಯ ತೆರೆಯಲು ಮತ್ತು ಸಮುದಾಯ ಆರೋಗ್ಯ ಕೇಂದ್ರದಿಂದ ಇಂಡಿಯನ್ ಆಯಿಲ್ ಪೆಟ್ರೋಲ್‌ಬಂಕ್‌ವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಕ್ಕೆ ಅವಶ್ಯಕ ಅಂಬುಲೆನ್ಸ್‌ನ್ನು ಒದಗಿಸಿದ್ದು, ಶೀಘ್ರದಲ್ಲಿಯೇ ಸೇವೆಗೆ ಲಭ್ಯವಾಗಲಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ರಂಗನಾಥ್ ಮಾತನಾಡಿ, ಕಡೂರಿನಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭವಾಗುವುದಕ್ಕೆ ಮುಂಚಿತವಾಗಿ ಪಂಚನಹಳ್ಳಿಯಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಿತ್ತು. ಹಾಗಾಗಿ ವಿದ್ಯಾರ್ಥಿಗಳ ಕೊರತೆ ನೀಗಿಸಿ ಕಾಲೇಜನ್ನು ಉಳಿಸಿಕೊಳ್ಳಬೇಕಾದ ಗುರುತರ ಜವಾಬ್ದಾರಿ ಗ್ರಾಮದ ಪ್ರತಿಯೊಬ್ಬರ ಮೇಲಿದೆ. ಕಾಲೇಜು ರಾಜಕೀಯದಿಂದ ದೂರ ಉಳಿಯಬೇಕು. ನೌಕರರು ಸಮನ್ವಯತೆಯಿಂದ ಕೆಲಸ ಮಾಡಿದರೆ ಶೈಕ್ಷಣಿಕ ಕೇಂದ್ರಗಳು ಅಭಿವೃದ್ಧಿ ಹೊಂದುತ್ತವೆ ಎಂದರು.