ಜಿಲ್ಲೆ

ಅರ್ಹರಿಗಷ್ಟೇ ಪರಿಹಾರ ಧನ, ಎಡಿಸಿ ಜಗದೀಶ್ ಕೆ.ನಾಯಕ್ ಸೂಚನೆ, ಡಿಸಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಪರಿಹಾರಧನ ಅರ್ಹರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಗ್ರಾಮಾಂತರ ಜಿಲ್ಲೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್ ಹೇಳಿದರು.

ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು. ಕರೊನಾ ಲಾಕ್‌ಡೌನ್ ಕಾರಣಕ್ಕಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ರಾಜ್ಯ ಸರ್ಕಾರ ಪರಿಹಾರಧನ ಘೋಷಿಸಿದೆ. ಈ ಸೌಲಭ್ಯ ನೈಜ ಫಲಾನುಭವಿಗಳಿಗೆ ಪರಿಹಾರ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯ ಸರ್ಕಾರ 5 ಸಾವಿರ ರೂ.ಪರಿಹಾರ ಧನ ೋಷಿಸಿದೆ. ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಉದ್ಯೋಗ ದೃಢೀಕರಣ ಪತ್ರ, ಆಧಾರ್, ಬಿಪಿಎಲ್. ಕಾರ್ಡ್, ಜನ್ಮ ದಿನಾಂಕಕ್ಕೆ ಸಂಬಂಧಪಟ್ಟ ದಾಖಲೆ ಹಾಗೂ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ಕ್ಷೌರಿಕ ವೃತ್ತಿಯ ಪರವಾನಗಿ ಪಡೆದ ಅಂಗಡಿ ಅಥವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಅರ್ಜಿ ಸಲ್ಲಿಸಲು ಇಚ್ಛಿಸುವ ಫಲಾನುಭವಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಉದ್ಯೋಗ ದೃಢೀಕರಣ ಪತ್ರ ಪಡೆದು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ಉದ್ಯೋಗ ದೃಢೀಕರಣ ಪತ್ರ ನೀಡುವ ಅಧಿಕಾರಿಗಳು ವೃತ್ತಿ ನೈಜತೆ ವಯಸ್ಸು ಸೇರಿ ಇನ್ನಿತರ ಮಾಹಿತಿಗಳನ್ನು ಪರಿಶೀಲನೆ ನಡೆಸಿದ ನಂತರವೇ ದೃಢೀಕರಣ ಪತ್ರ ನೀಡಬೇಕು ಎಂದು ತಿಳಿಸಿದರು.

ಮಹಿಳಾ ಫಲಾನುಭವಿಗಳು ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರೆ ಮಾತ್ರ ಪರಿಹಾರ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಬ್ಯೂಟೀಷಿಯನ್ ಅಥವಾ ಇತರೆ ಕೆಲಸಗಳನ್ನು ನಿರ್ವಹಿಸುತ್ತಿರುವಂತವರು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ ಎಂದು ಕಾರ್ಮಿಕ ಅಧಿಕಾರಿ ಧನಂಜಯ್ ಹೇಳಿದರು.

ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸುಬ್ಬಾರಾವ್, ಕಾರ್ಮಿಕ ನಿರೀಕ್ಷಕ ಪ್ರದೀಪ್, ಸುರೇಶ್, ಸೇವಾಸಿಂಧು ತಾಂತ್ರಿಕ ಸಲಹೆಗಾರ ಮಂಜೇಶ್ ಮತ್ತಿತರರು ಇದ್ದರು.