ವಿಜಯವಾಣಿ ಸುದ್ದಿಜಾಲ ಧಾರವಾಡ
ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕಲಾಭವನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿಪತ್ರ ರವಾನಿಸಿದರು.
ಹೊಸ ಪಿಂಚಣಿ ಯೋಜನೆ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ಮಾರಕವಾಗಿ ಪರಿಣಮಿಸಿದೆ. ಈ ಯೋಜನೆಯಿಂದ ನೌಕರರಲ್ಲಿ ಅಭದ್ರತೆ ಕಾಡುತ್ತಿದೆ. ಹೊಸ ಪಿಂಚಣಿ ಯೋಜನೆಯಿಂದ ನೌಕರರು ನಿವೃತ್ತಿ ಕಾಲವನ್ನು ನೆಮ್ಮದಿಯಿಂದ ಕಳೆಯಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಬೇಕು. ಐದು ವರ್ಷಕ್ಕೆ ಚುನಾಯಿತರಾಗುವ ಶಾಸಕರು ಪಿಂಚಣಿ ಸೌಲಭ್ಯ ಪಡೆದುಕೊಳ್ಳುತ್ತಾರೆ. ಆದರೆ ಸರ್ಕಾರಿ ನೌಕರರಿಗೆ ಏಕಿಲ್ಲ? ಎಂದು ಪ್ರಶ್ನಿಸಿದರು.
ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಒದಗಿಸಬೇಕು. ಕೂಡಲೇ 7ನೇ ವೇತನ ಜಾರಿಗೊಳಿಸಬೇಕು. 1995 ರ ನಂತರದ ಕನ್ನಡ ಶಾಲೆಗಳಿಗೆ ಅನುದಾನ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ವಿ.ಎಸ್. ಹುದ್ದಾರ, ಎನ್.ಎನ್. ಸವಣೂರ, ಸಂಗಮೇಶ ಹಡಪದ, ಸಂದೀಪ ಬೂದಿಹಾಳ, ಎಸ್.ಎಲ್. ಶೇಖರಗೋಳ, ಆರ್.ಎಸ್. ಪಾಟೀಲ, ಎನ್.ಎಸ್. ಗೋವಿಂದರೆಡ್ಡಿ, ವರ್ಧಮಾನ ಕುರಕರಿ, ಮಲ್ಲನಗೌಡ ಪಾಟೀಲ, ಉಷಾ ಹೊಸಮಠ, ಇತರರು ಇದ್ದರು.