ಜಿಲ್ಲೆ

ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯ

ಮೈಸೂರು: ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಜ.14ರವರೆಗೆ ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು, ಸಚಿವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಸರ್ಕಾರ ಈಗಾಗಲೇ ನೀಡಿರುವ ಶೇ.17 ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ.40 ಫಿಟ್‌ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 2022ರ ಜು.1ರಿಂದ ಜಾರಿಗೆ ತರಬೇಕು. ಹಳೇ ಪಿಂಚಿಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರಬೇಕು. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್‌ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕದಲ್ಲೂ ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರೇವಣ್ಣ, ಪದಾಧಿಕಾರಿಗಳಾದ ರಮೇಶ್‌ಕುಮಾರ್, ಭಾಸ್ಕರ್, ರಘು ಹಾಜರಿದ್ದರು.