ಪಿರಿಯಾಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ, ಆತನನ್ನು ಗಡಿಪಾರು ಮಾಡುವಂತೆ ಅಗ್ರಹಿಸಿ ತಾಲೂಕು ಕನಕ ಕುರುಬ ಸಂಘವು ಸೋಮವಾರ ತಹಸೀಲ್ದಾರ್‌ರಿಗೆ ಮನವಿ ಸಲ್ಲಿಸಿತು.
ತಾಲೂಕು ಕನಕ ಕುರುಬ ಸಂಘದ ಅಧ್ಯಕ್ಷ ಎಚ್.ಡಿ.ಗಣೇಶ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ಯತೀತ, ಪಕ್ಷಾತೀತವಾಗಿ ಪ್ರತಿ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಉತ್ತಮ ಆಡಳಿತ ನೀಡುತ್ತಿದ್ದಾರೆ. ಬಡವರು, ರೈತರು, ಮಹಿಳೆಯರ ಅಭಿವೃದ್ಧಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡ್ಯದ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತು ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ. ಈ ಕಿಡಿಗೇಡಿಯಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗುತ್ತಿದೆ. ಆದ್ದರಿಂದ ಈತನ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಆತನನ್ನು ಗಡಿಪಾರು ಮಾಡಬೆಬಕು ಎಂದು ಒತ್ತಾಯಿಸಿದರು.
ತಾಲೂಕು ಕಚೇರಿಗೆ ತೆರಳಿದ ಸಮಾಜದ ಮುಖಂಡರು ತಹಸೀಲ್ದಾರ್ ನಿಸರ್ಗಪ್ರಿಯ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಅಲ್ಲದೆ ಪೊಲೀಸ್ ವೃತ್ತ ನಿರೀಕ್ಷಕರಿಗೆ ಕಿಡಿಗೆಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸುನೀಲ್, ಗ್ರಾ ಪಂ ಸದಸ್ಯೆ ಪದ್ಮಲತಾ, ಮುಖಂಡರಾದ ಆರ್.ಟಿ.ರೇವಣ್ಣ, ಲಕ್ಷ್ಮಣ ಗೌಡ, ಲೋಹಿತ್, ಚಿಕ್ಕೆಗೌಡ, ಸೋಮಣ್ಣ, ಶೇಷಗಿರಿ, ರಾಜೇಗೌಡ, ಚಂದ್ರು, ಮಹದೇವ್, ಶಿವಪ್ಪ, ಬಸವರಾಜ್, ದುಷ್ಯಂತ, ಜಯರಾಮ್ ಇತರರು ಇದ್ದರು.