ಮೂಲ್ಕಿ: ಕರ್ನಾಟಕ ಕೇರಳ ಗಡಿ ಪ್ರದೇಶವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರಿನಲ್ಲಿ ಕೆಲ ದಿನಗಳ ಹಿಂದೆ ಕೊಲೆಗೀಡಾದ ರೀತಿಯಲ್ಲಿ ಪತ್ತೆಯಾಗಿದ್ದ ಮೂಲ್ಕಿ ಸಮೀಪದ ಕೋಲ್ನಾಡುವಿನ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಕರ್ನಾಟಕ-ಕೇರಳ ಗಡಿಭಾಗದ ಪ್ರದೇಶದಲ್ಲಿ ಅನೇಕ ಕ್ರಿಮಿನಲ್ ಚಟುವಟಿಕೆಗಳು ನಡೆಯುತ್ತಿವೆ. ಕೇರಳ ಪೊಲೀಸರ ಜತೆ ಈ ಬಗ್ಗೆ ಮಾತುಕತೆ ನಡೆಸಿ ಕರ್ನಾಟಕ ಹಾಗೂ ಕೇರಳ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕ್ರಿಮಿನಲ್‌ಗಳನ್ನು ಮಟ್ಟ ಹಾಕಲಾಗುವುದು. ಮುಹಮ್ಮದ್ ಶರೀಫ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು,ಆತನ ಹಿನ್ನೆಲೆ ಹಾಗೂ ಈ ಕೊಲೆಯಲ್ಲಿ ಭಾಗಿಯಾದವರ ಬಗ್ಗೆ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮೂಲ್ಕಿ ನಪಂ ಸದಸ್ಯರಾದ ಪುತ್ತು ಬಾವ, ಮಂಜುನಾಥ ಕಂಬಾರ, ಬಾಲಚಂದ್ರ ಕಾಮತ್, ಮೂಲ್ಕಿ ನಪಂ ಮಾಜಿ ಅಧ್ಯಕ್ಷ ಬಿ.ಎಂ.ಆಸೀಫ್, ಮಾಜಿ ಸದಸ್ಯ ಹಸನ್ ಬಶೀರ್ ಕುಳಾಯಿ, ಗೋಳಾಲಪ್ಪ, ವೀರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಖಾದರ್ ಎ.ಎಚ್. ಮತ್ತಿತರರು ಉಪಸ್ಥಿತರಿದ್ದರು. ಎಸಿಪಿ ಶ್ರೀಕಾಂತ್, ಮೂಲ್ಕಿ ಪೊಲೀಸ್ ನಿರೀಕ್ಷಕ ವಿದ್ಯಾಧರ್ ವಿಶೇಷ ಬಂದೋಬಸ್ತ್ ಏರ್ಪಡಿಸಿದ್ದರು.