ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗ್ರುಪ್ ಹುದ್ದೆಗಳ ನೇಮಕಾತಿಗೆ ಡಿ.16 ಹಾಗೂ 17 ರಂದು ನಡೆಯಲಿರುವ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವ ಸಿದ್ಧತೆ ಸಭೆ ನಡೆಸಿದ ಅವರು, ವಿಜಯಪುರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಗಳು ವ್ಯವಸ್ಥಿತವಾಗಿ ಜರುಗುವಂತೆ ನೋಡಿಕೊಳ್ಳಬೇಕೆಂದರು.
ಡಿ.16 ರಂದು ಬಾಲಕರ ಸರ್ಕಾರಿ ಪಿಯು ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಜರುಗುವ ಕನ್ನಡ ಭಾಷಾ ಪರೀಕ್ಷೆಗೆ 59 ಅಭ್ಯರ್ಥಿಗಳು ಹಾಗೂ ಡಿ.17 ರಂದು ನಗರದ ಬಾಲಕರ ಸರ್ಕಾರಿ ಪಿಯು ಕಾಲೇಜ್, ಬಾಲಕಿಯರ ಕಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಪಿಡಿಜೆ ಹೈಸ್ಕೂಲ್ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ 11.30ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ ಹಾಗೂ ಅಪರಾಹ್ನ 2 ರಿಂದ ಸಂಜೆ 4 ರವರೆಗೆ ಜರುಗುವ ಪತ್ರಿಕೆ-2 ಸಾಮಾನ್ಯ ಕನ್ನಡ, ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ಪರೀಕ್ಷೆಗೆ 227 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ರವಾನೆ, ಪರೀಕ್ಷಾ ಕೇಂದ್ರದಲ್ಲಿನ ಅಗತ್ಯ ಸಿದ್ಧತೆ ಕುರಿತು ಪರಿಶೀಲನೆ ನಡೆಸಬೇಕು.
ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಕೈಗೊಳ್ಳಬೇಕು. ಮೇಲ್ವಿಚಾರಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಶಿಕ್ಷಣಾಧಿಕಾರಿ ಅಶೋಕ ಲಿಮಕರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪುರ, ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ ಮತ್ತಿತರರಿದ್ದರು.