ಮಡಿಕೇರಿ: ಮಾ೩೧ ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರು ನಿರ್ದೇಶನ ನೀಡಿದರು.
ನಗರದ ಸಂತ ಮೈಕಲರ ಶಾಲೆಯ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಬಂಧಿಸಿದಂತೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಘಟ್ಟವಾಗಿದೆ. ಈ ಹಿನ್ನೆಲೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗಾಬರಿ ಉಂಟು ಮಾಡಬಾರದು. ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಶ್ನೆ ಪತ್ರಿಕೆ ಪೂರೈಕೆ ಸಂಬಂಧಿಸಿದಂತೆ ಸರ್ಕಾರಿ ವಾಹನವನ್ನೇ ಬಳಸಬೇಕು. ಯಾವುದೇ ಲೋಪ ಉಂಟಾಗದಂತೆ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ವಿವಿಧ ಹಂತದ ಅಧಿಕಾರಿಗಳಿಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್‌ಗಳು, ತಾಲೂಕು ನೋಡಲ್ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತಿ ದಳದ ಸಿಬ್ಬಂದಿ, ಇತರರ ಕರ್ತವ್ಯ ನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಇತರೆ ಸಂದರ್ಭದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸಮಸ್ಯೆಗಳಿದ್ದಲ್ಲಿ ೧೧೨ ಕ್ಕೆ ಕರೆ ಮಾಡಬಹುದು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಯ್ಯ ಮಾತನಾಡಿ, ಜಿಲ್ಲೆಯ ೩೧ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೧೫ ಮತ್ತು ವಿರಾಜಪೇಟೆ ತಾಲೂಕಿನಲ್ಲಿ ೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು ೧೭೦ ಶಾಲೆಗಳ ೬,೫೮೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲೂಕಿನ ೪೩ ಶಾಲೆಗಳ ೧,೮೮೬, ಸೋಮವಾರಪೇಟೆ ತಾಲೂಕಿನ ೭೦ ಶಾಲೆಗಳ ೨,೬೧೧ ವಿದ್ಯಾರ್ಥಿಗಳು, ವಿರಾಜಪೇಟೆ ತಾಲೂಕಿನ ೫೭ ಶಾಲೆಯ ೨,೦೯೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ೩೧ ಮುಖ್ಯ ಅಧೀಕ್ಷಕರು ಮತ್ತು ೩೧ ಕಸ್ಟೋಡಿಯನ್‌ಗಳು, ಮೂರು ತಾಲೂಕು ನೋಡಲ್ ಅಧಿಕಾರಿಗಳು, ೧೫ ಮಾರ್ಗಾಧಿಕಾರಿಗಳು, ೧೫ ಮಾರ್ಗಾಧಿಕಾರಿಗಳಿಗೆ ಅಗತ್ಯವಿರುವ ವಾಹನಗಳು, ೩೧ ಸ್ಥಾನಿಕ ಜಾಗೃತ ದಳದ ಸಿಬ್ಬಂದಿ, ಹಾಗೆಯೇ ೩೧ ಮೊಬೈಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಡಯಟ್ ಪ್ರಾಂಶುಪಾಲ ಮಲ್ಲೇಶಪ್ಪ, ಪ್ರೊಭೆಷನರಿ ತಹಶೀಲ್ದಾರ್ ರುಕ್ಮಿಣಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್(ಮಡಿಕೇರಿ), ಕೆ.ವಿ.ಸುರೇಶ್(ಸೋಮವಾರಪೇಟೆ), ಶ್ರೀಶೈಲ ಬೀಳಗಿ (ವಿರಾಜಪೇಟೆ), ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸದಾಶಿವ ಪಲ್ಲೇದ್, ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ವಿವಿಧ ಹಂತದ ಅಧಿಕಾರಿಗಳು ಇದ್ದರು.