ಜಿಲ್ಲೆ

ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಡಾ ನಿವೇಶನ ಹಂಚಿಕೆ, ವಾಲ್ಮೀಕಿ ನಿಗಮದ ಹಗರಣದಂಥ ಗಂಭೀರವಾದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದರಲ್ಲಿ ಅವರು ಸಾಫಲ್ಯ ಕಾಣುವುದಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಮೇಲೆ ಬೇರೆ ಬೇರೆ ಭ್ರಷ್ಟಾಚಾರದ ಪ್ರಕರಣಗಳಿವೆ ಎಂದು ಕಾಂಗ್ರೆಸ್ಸಿಗರು ಮಾತನಾಡುತ್ತಿದ್ದಾರೆ. ಹಳೇದು-ಹೊಸತು ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಎಂದು ನಾವು ಈಗಾಗಲೇ ಸ್ಪಷ್ಟ ಪಡಿಸಿದ್ದೇವೆ. ತನಿಖೆಗೆ ನಮ್ಮದೇನೂ ಆಕ್ಷೇಪಣೆ ಇಲ್ಲ. ಆದರೆ, ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕಾರಣಕ್ಕೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ಕೊಡಬೇಕಿತ್ತು. ಅದು ಬಿಟ್ಟು ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಹದಾಯಿ ವಿಚಾರದಲ್ಲಿ ಒಂದಿಂಚೂ ಹೆಜ್ಜೆ ಮುಂದಿಟ್ಟಿದ್ದು ಬಿಜೆಪಿ ಮಾತ್ರ. ಈ ವಿಷಯದಲ್ಲಿ ನಾವು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ರಾಜ್ಯ ಸರ್ಕಾರ ಸಂಪೂರ್ಣ ಕೈಜೋಡಿಸುವ ಕೆಲಸ ಮಾಡಬೇಕು. ಹಿಂದೆ ಗೋವಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಮಹದಾಯಿಯಿಂದ ಒಂದು ಹನಿ ನೀರು ಕೊಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರೇ ಹೇಳಿದ್ದರು. ಈಗ ಕಾಂಗ್ರೆಸ್ಸಿಗಲು ಬಹಳ ಮಾತನಾಡುತ್ತಿದ್ದಾರೆ. ಈ ಕುರಿತು ಕಾಂಗ್ರೆಸ್ ರಾಜಕಾರಣ ಮಾಡದೇ ಪರಿಹಾರದ ಕಡೆ ಗಮನ ಹರಿಸುವ ಪ್ರಯತ್ನ ಮಾಡಬೇಕು ಎಂದರು.