ವಿಜಯವಾಣಿ ಸುದ್ದಿಜಾಲ ಉಡುಪಿ
ಚಂಡೀಗಡ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಉಡುಪಿ ತಾಲೂಕಿನ ಹಿರಿಯಡ್ಕದ ಎಚ್.ರಾಜೇಶ್ ಪ್ರಸಾದ್ (ಐಎಎಸ್) ಅವರಿಗೆ ನ.15ರಂದು ಸಂಜೆ 4 ಗಂಟೆಗೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿದರು.
ಉಡುಪಿಯ ಪತ್ರಿಕಾಭವನದಲ್ಲಿ ಮಂಗಳವಾರ (ನ.11) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತದ ನಾಗರಿಕ ಸೇವೆಯಲ್ಲಿ ಅತ್ತುನ್ನತವಾದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಉಡುಪಿ ಜಿಲ್ಲೆಯಿಂದ ಪ್ರಥಮ ಬಾರಿಗೆ ಅವರು ಆ ಸ್ಥಾನ ಅಲಂಕರಿಸಿರುವುದು ನಮ್ಮ ಜಿಲ್ಲೆಗೇ ಅಭಿಮಾನ ಹಾಗೂ ಹೆಮ್ಮೆಯ ಪ್ರತೀಕವಾಗಿದೆ ಎಂದರು.
ಅಂದು ನಡೆಯುವ ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಟಿ. ಸತಿಶ್ ಯು. ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ ಅಭಿನಂದಿಸಲಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು,ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಯುವ ಸಮುದಾಯಕ್ಕೆ ಪ್ರೇರಣೆಯಾಗಿರುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಂಜಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ. ಸುರೇಂದ್ರನಾಥ್ ಶೆಟ್ಟಿ ಕೊಕ್ಕರ್ಣೆ, ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ ಚಾಂತಾರು, ಅಭಿನಂದನಾ ಸಮಿತಿ ಸದಸ್ಯ ವಿನಯ್ ಚೇರ್ಕಾಡಿ ಇದ್ದರು.