ಶಾಸಕ ಯಶ್ಪಾಲ್ ಸುವರ್ಣ ಅಭಿಮತ
ಶೇ.100 ಫಲಿತಾಂಶದ ಶಾಲೆಗಳಿಗೆ ಅಭಿನಂದನೆ
ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸುವ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕಿದೆ. ಹೀಗಾಗಿ ಪ್ರತಿ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿಯ ಕಾರ್ಯ ಎಲ್ಲ ಶಿಕ್ಷಕರ ಮೇಲಿದೆ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಭಿಮತ ವ್ಯಕ್ತಪಡಿಸಿದರು.
ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಮೇ 27ರಂದು ಬೇಳಗ್ಗೆ ಆಯೋಜಿಸಿದ್ದ 2022&-23 ಮತ್ತು 2023-&24ನೇ ಸಾಲಿನ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಗಳಿಸಿದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರ ಶ್ರಮ ಅಪಾರ
ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಪ್ರೌಢಶಾಲೆಗಳು ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತವೆ. ಜಿಲ್ಲೆಯ ಶೈಕ್ಷಣಿಕ ಮಟ್ಟ ಹೆಚ್ಚಿಸಲು ವಿಶೇಷ ತರಗತಿ ನಡೆಸಿರುವುದನ್ನು ಕಂಡಿದ್ದೇನೆ. ಶಿಕ್ಷಕರು ಹಲವಾರು ಕಾರ್ಯಕ್ರಮ ಆಯೋಜಿಸಿ, ಫಲಿತಾಂಶದ ಸುಧಾರಣೆಗೆ ಶ್ರಮವಹಿಸಿದ್ದಾರೆ. ಇಲಾಖೆಯೂ ಸಹ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡಿದೆ. ಮುಂದಿನ ವರ್ಷ ನಮ್ಮ ಗುರಿ ಏನೆಂಬುದನ್ನು ಈಗಲೇ ನಿರ್ಧರಿಸಬೇಕು ಎಂದರು.
ವಿದ್ಯಾರ್ಥಿಗಳಿಗೆ ಸನ್ಮಾನ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಸ್ವಸ್ತಿ ಕಾಮತ, ನಿಧಿ ಪೈ ಹಾಗೂ ಸಾಯಿಸ್ಪರ್ಶ ಅವರನ್ನು ಸನ್ಮಾನಿಸಲಾಯಿತು. 2022-23 ಮತ್ತು 2023-24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಗಳಿಸಿದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಒಟ್ಟು 147 ಪ್ರೌಢಶಾಲೆಗಳಿಗೆ ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬ್ರಹ್ಮಾವರ ತಾಲೂಕು ಮಟ್ಟದಲ್ಲಿ ಮೊದಲ ಮೂರು ಸ್ಥಾನ ಗಳಿಸಿದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು.
ಈ ತಿಂಗಳ ಅಂತ್ಯಕ್ಕೆ ನಿವೃತ್ತರಾಗಲಿರುವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ ಹೆಗಡೆ, ಶಿಕ್ಷಕರ ಸಂಘದ ಪ್ರತಿನಿಧಿ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಸೈಂಟ್ ಸಿಸಿಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ, ಜಿಲ್ಲೆಯ ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಷಯ ಪರಿವೀಕ್ಷಕ ನಾಗರಾಜ ಎಂ. ವಂದಿಸಿದರು. ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ನಿರೂಪಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯು ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಶಿಕ್ಷಣ ಹಾಗೂ ಆರೋಗ್ಯದ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರು ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್ ಆಗುವುದರಲ್ಲಿ ಆಸಕ್ತರಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಐಎಎಸ್, ಐಪಿಎಸ್ ನಂತಹ ಹುದ್ದೆ ಗಳಿಸಲು ಯತ್ನಿಸಬೇಕು.
| ಯಶ್ಪಾಲ್ ಸುವರ್ಣ. ಶಾಸಕ