ಹುಬ್ಬಳ್ಳಿ: ಹುಬ್ಬಳ್ಳಿ ಶಹರ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಬುಧವಾರ ನಡೆಸಿದ್ದ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷವನ್ನು ಅಪಮಾನಗೊಳಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ನಗರದ ವಿವಿಧ ಠಾಣೆಗಳಿಗೆ ದೂರು ನೀಡಿದ್ದಾರೆ.
ಬಿಜೆಪಿ ಪ್ರತಿಪಕ್ಷ ನಾಯಕ ಆರ್. ಅಶೋಕ, ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ, ಪ್ರದೀಪ ಶೆಟ್ಟರ್ ಸೇರಿದಂತೆ ಬಹಳಷ್ಟು ಕಾರ್ಯಕರ್ತರು, ಸಿದ್ದರಾಮಯ್ಯ ಅವರನ್ನು ಸಿದ್ರಾ ಮುಲ್ಲಾ, ಲುಚ್ಚಾ, ಹೇಡಿ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೂ ಅವಮಾನ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಘೋಷಣೆ ಕೂಗಿದ್ದಾರೆ ಎಂದು ಹುಬ್ಬಳ್ಳಿ ಶಹರ, ಉಪನಗರ ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶ್ರೀಕಾಂತ ಪೂಜಾರ ಅವರನ್ನು ಬಂಧಿಸಿದ್ದರ ಪ್ರತಿಯಾಗಿ ಪೂರ್ವ ನಿಯೋಜಿತ ಸಂಚಿನಿಂದ, ಅಪರಾಧ ಎಸಗುವ ದುರುದ್ದೇಶದಿಂದ ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಇಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಪಾಲಿಕೆ ಪ್ರತಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲಾ, ನಾಯಕರಾದ ಸದಾನಂದ ಡಂಗನವರ, ಸತೀಶ ಮೆಹರವಾಡೆ, ನಾಗೇಶ ಕಲಬುರ್ಗಿ, ರಾಜಶೇಖರ ಮೆಣಸಿನಕಾಯಿ, ದೊರೆರಾಜ ಮನಕುಂಟ್ಲಾ, ದೀಪಾ ಗೌರಿ, ಬಂಗಾರೇಶ ಹಿರೇಮಠ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.