ಜಿಲ್ಲೆ

ಡಾ.ಎಚ್.ಎನ್.ರವೀಂದ್ರ ವಿರುದ್ಧ ದೂರು: ಕಾನೂನು ಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಒತ್ತಾಯ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮುಖಂಡ ಡಾ.ಎಚ್.ಎನ್.ರವೀಂದ್ರ ಸುಳ್ಳು ಆರೋಪದ ಮೂಲಕ ಮಾನಹಾನಿ, ವರ್ಚಸ್ಸಿನ ತೇಜೋವಧೆ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೂರು ಸಲ್ಲಿಸಿದರು.

ಸಚಿವ ಎನ್.ಚಲುವರಾಯಸ್ವಾಮಿ ಅವರು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸದ ಡಾ.ಎಚ್.ಎನ್.ರವೀಂದ್ರ ಅವರು ಸಾಮಾಜಿಕ ಜಾಲತಾಣದ ಮೂಲಕ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ರವೀಂದ್ರ, ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಮಾಡುವಂತೆ ಸಚಿವರಿಗೆ ಒತ್ತಾಯಿಸುತ್ತಿದ್ದರು. ಆದರೆ ಅವರಿಗೆ ಅವಕಾಶ ಸಿಗದ ಕಾರಣ ಪೂರ್ವಗ್ರಹ ಪೀಡಿತರಾಗಿ ತೇಜೋವಧೆ ಮಾಡುತ್ತಿದ್ದಾರೆ. ಆದ್ದರಿಂದ ರವೀಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಇನ್ನು ಮುಂದೆ ಈ ರೀತಿಯ ಕೃತ್ಯದಲ್ಲಿ ಅವರು ತೊಡಗಿಕೊಳ್ಳದಂತೆ ಎಚ್ಚರಿಕೆ ನೀಡುವಂತೆ ಮನವಿ ಮಾಡಿದರು.

ಮುಡಾ ಅಧ್ಯಕ್ಷ ನಯೀಂ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ, ಕನ್ನಲಿ ಚನ್ನಪ್ಪ, ನವೀನ್‌ಕುಮಾರ್, ರಾಮಕೃಷ್ಣ, ಜಬೀವುಲ್ಲಾ, ನಾಗೇಶ್, ವಿಜಯಕುಮಾರ್ ಇತರರಿದ್ದರು.