ಜಿಲ್ಲೆ

ಮೋದಿ ವಿರುದ್ಧ ಹತಾಶೆಗೊಂಡು ಕಾಂಗ್ರೆಸ್ ಟೀಕೆ

ಸದೇಶ್ ಕಾರ್ಮಾಡ್

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದ್ದು, ಇದರಿಂದ ಹತಾಶೆಗೊಳಗಾದ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ವಿರುದ್ಧ ಕೀಳುಮಟ್ಟದ ಟೀಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ವಸಂತ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ದೇಶದ ಯಾವುದೇ ಭಾಗದಲ್ಲೂ ಕಾಂಗ್ರೆಸ್‌ಗೆ ಜನರಿಂದ ಉತ್ತಮ ಬೆಂಬಲ ದೊರೆಯುತ್ತಿಲ್ಲ. ಹೀಗಾಗಿ ಚುನಾವಣೆಗೂ ಮುನ್ನವೇ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಎಲ್ಲರೂ ಬಿಜೆಪಿ ವಿರುದ್ಧ ಟೀಕೆಯಲ್ಲಿ ತೊಡಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿದ್ದರಾಮಯ್ಯ ಏಕವಚನದಲ್ಲಿ ಅಪಹಾಸ್ಯ ಮಾಡಿರುವುದು ಖಂಡನೀಯ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದನ್ನು ಮರೆ ಮಾಚುವ ಸಲುವಾಗಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದಾರೆ. ರಾಜ್ಯವನ್ನು ಸರಿಯಾಗಿ ಮುನ್ನಡೆಸಲು ಸಾಧ್ಯವಾಗದೆ ಕೇಂದ್ರ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ದೇಶ ಕಟ್ಟುವ ಕಾರ್ಯ ಮಾಡುತ್ತಿದ್ದಾರೆ. ಆದರೆ, ಮತ್ತೊಂದೆಡೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ದೇಶ ವಿಭಜನೆಯ ಮಾತುಗಳನ್ನು ಆಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ವಾತಂತ್ರೃ ನಂತರ ದೇಶವನ್ನು ವಿಭಜನೆ ಮಾಡಿದರು. ಅವರ ಮನಸ್ಥಿತಿಯಲ್ಲಿ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ ಎಂದು ಟೀಕಿಸಿದರು.

ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಮಪ್ಪ ಮಾತನಾಡಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ನ್ಯಾಯ ಯಾತ್ರೆಯಲ್ಲಿ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆ. ದೇಶದ ಅತ್ಯುನ್ನತ ಸ್ಥಾನದಲ್ಲಿರುವವರ ಬಗ್ಗೆ ಕೇವಲವಾಗಿ ಮಾತನಾಡಿರುವ ರಾಹುಲ್ ಗಾಂಧಿ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.