ಜಿಲ್ಲೆ

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ

ಮಡಿಕೇರಿ:

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ. ಪೀಟರ್, ಮಡಿಕೇರಿ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ. ಹನೀಫ್ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಶೇ.೧೦೦ ರಷ್ಟು ಮತಗಳನ್ನು ನೀಡುತ್ತಾ ಬರುತ್ತಿರುವ ಅಲ್ಪಸಂಖ್ಯಾತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಒಂದು ವೇಳೆ ಕಡೆಗಣಿಸಿದರೆ ಅಲ್ಪಸಂಖ್ಯಾತರಿಗೆ ನಾವು ದ್ರೋಹ ಮಾಡಿದಂತಾಗುತ್ತದೆ ಎಂದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಸಭಾ ಸದಸ್ಯ ಯಾಕುಬ್ ಮಾತನಾಡಿದರು. ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸೈಯ್ಯದ್ ಬಾವ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಮುನೀರ್ ಮಾಚಾರ್, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಇಬ್ರಾಹಿಂ, ಪ್ರಮುಖರಾದ ಎಂ.ಹೆಚ್.ಅಜೀಜ್ ಮತ್ತಿತರರು ಇದ್ದರು.
ಇದೇ ವೇಳೆ ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಎಂ.ಬಿ.ಕೌಸರ್ ಮತ್ತು ಪ್ರಧಾನ ಕಾರ್ಯದರ್ಶಿಯನ್ನಾಗಿ ಎಂ.ಇ.ಫರೂಕ್ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.